ಸೂರತ್ (ಗುಜರಾತ್): ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತ ಹಾಗೂ 8 ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದ ಹಿನ್ನೆಲೆ ಸೂರತ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮುಖೇಶ್ ದಲಾಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯದ ಬಿಜೆಪಿ ಮುಖ್ಯಸ್ಥ ಸಿ. ಆರ್. ಪಾಟೀಲ್ ತಿಳಿಸಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ಸೂರತ್‌ನಿಂದ ಮೊದಲ ಜಯವನ್ನು ಅರ್ಪಿಸಿದೆ. ಸೂರತ್ ಲೋಕಸಭಾ ಕ್ಷೇತ್ರಕ್ಕೆ ನಮ್ಮ ಅಭ್ಯರ್ಥಿ ಮುಖೇಶ್ ದಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಕ್ಕಾಗಿ ನಾನು ಅಭಿನಂದಿಸುತ್ತೇನೆ" ಎಂದು ಪಾಟೀಲ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಇಂದು(ಸೋಮವಾರ), ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಸೇರಿದಂತೆ 8 ಮಂದಿ ನಾಮಪತ್ರವನ್ನು ಹಿಂಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರು ಸಲ್ಲಿಸಿದ್ದ ನಾಮಪತ್ರದಲ್ಲಿ ಸೂಚಕರ ಸಹಿಯಲ್ಲಿ ಆಗಿರುವ ವ್ಯತ್ಯಾಸ ಜಿಲ್ಲಾ ಚುನಾವಣಾಧಿಕಾರಿಗೆ ಕಂಡುಬಂದ ಕಾರಣ ಅವರ ನಾಮಪತ್ರವನ್ನು ಭಾನುವಾರ ತಿರಸ್ಕರಿಸಲಾಗಿತ್ತು. ಇದರೊಂದಿಗೆ ಕಾಂಗ್ರೆಸ್‌ನ ಬದಲಿ ಅಭ್ಯರ್ಥಿ ಸುರೇಶ್ ಪಡಸಾಲ ಅವರ ನಾಮಪತ್ರವೂ ಅಸಿಂಧುಗೊಂಡಿದೆ.
ಇದನ್ನೂ ಓದಿ: ಸರನಿಯಾ ನಾಮಪತ್ರ ರದ್ದು; ಸತತ ಮೂರನೇ ಬಾರಿಗೆ ಸಂಸದರಾಗುವ ಕನಸು ಭಗ್ನ - Nomination Cancelled