ಹೈದರಾಬಾದ್(ತೆಲಂಗಾಣ): ತೆಲಂಗಾಣ ರಾಜ್ಯಪಾಲ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಅವರು ಇಂದು ರಾಜೀನಾಮೆ ನೀಡಿದ್ದಾರೆ. ಇದರ ಜೊತೆಗೆ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೂ ರಾಜೀನಾಮೆ ಸಲ್ಲಿಸಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ತಮಿಳಿಸೈ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರವಾನಿಸಿದ್ದಾರೆ. ತೆಲಂಗಾಣ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮಿಳಿಸೈ ಇಂದು ಬೆಳಗ್ಗೆ ಸೌಜನ್ಯಯುತವಾಗಿ ಭೇಟಿ ಮಾಡಿದ್ದರು. ಬಳಿಕ ರಾಜೀನಾಮೆ ನಿರ್ಧಾರ ಕೈಗೊಂಡಿದ್ದಾರೆ.
ತಮಿಳುನಾಡಿನವರಾದ ತಮಿಳಿಸೈ ಸೌಂದರರಾಜನ್ ಸೆಪ್ಟೆಂಬರ್ 8, 2019ರಂದು ತೆಲಂಗಾಣ ರಾಜ್ಯಪಾಲರಾದರು. 18ನೇ ಫೆಬ್ರವರಿ 2021ರಿಂದ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿಯೂ ಹೆಚ್ಚುವರಿ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಈ ಹಿಂದೆ ತಮಿಳುನಾಡು ಬಿಜೆಪಿ ಅಧ್ಯಕ್ಷೆಯಾಗಿ ಕೆಲಸ ಮಾಡಿದ್ದ ತಮಿಳಿಸೈ, 2019ರ ಚುನಾವಣೆಯಲ್ಲಿ ತೂತುಕುಡಿಯಿಂದ ಲೋಕಸಭೆಗೆ ಸ್ಪರ್ಧಿಸಿದ್ದ ಕರುಣಾನಿಧಿ ಪುತ್ರಿ ಕನಿಮೊಳಿ ವಿರುದ್ಧ ಸೋತಿದ್ದರು. ಅದರ ನಂತರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು.
2024ರ ಲೋಕಸಭೆ ಚುನಾವಣೆಯಲ್ಲಿ ತಮಿಳಿಸೈ ಸೌಂದರರಾಜನ್ ಮತ್ತೆ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹಬ್ಬಿದ್ದವು. ಚೆನ್ನೈ ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಗೋಚರಿಸಿದೆ. ತಮಿಳಿಸೈ ಅವರು ಇಂದು ಸಂಜೆ 4 ಗಂಟೆಗೆ ಹೈದರಾಬಾದ್‌ನಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?: ಕುಮಾರಸ್ವಾಮಿ ಅಥವಾ ನಿಖಿಲ್ ಸ್ಪರ್ಧೆಗೆ ಒತ್ತಾಯ