ಮುಂಬೈ(ಮಹಾರಾಷ್ಟ್ರ): ದೇಶದ ವಾಣಿಜ್ಯ ರಾಜಧಾನಿ ಮುಂಬೈಗೆ ಭಯೋತ್ಪಾದಕರ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭಿಸಿದೆ. ಈ ಹಿನ್ನೆಲೆಯಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರ ಕಟೆಚ್ಚರಕ್ಕೆ ಸೂಚಿಸಲಾಗಿದೆ. ಮುಂಬೈನಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಪ್ರಾರ್ಥನಾ ಮಂದಿರಗಳು ಮತ್ತು ಇತರ ಜನನಿಬಿಡ ಪ್ರದೇಶಗಳಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳಿಂದಲೂ ಮಾಕ್ ಡ್ರಿಲ್ ನಡೆಸಲಾಗುತ್ತಿದೆ.
ವಿವಿಧ ನಗರಗಳ ಡಿಸಿಪಿಗಳು (ಪೊಲೀಸ್ ಉಪ ಆಯುಕ್ತರು) ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಉನ್ನತ ಅಧಿಕಾರಿಗಳು ಸೂಚಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಮಾಹಿತಿ ಇದ್ದಲ್ಲಿ ಮಾಹಿತಿ ನೀಡಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧ ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಪಡೆಗಳನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ.
ಮುಂಬೈನ ಪ್ರಸಿದ್ಧ ಧಾರ್ಮಿಕ ಸ್ಥಳಗಳ ನೆಲೆಯಾಗಿರುವ ಕ್ರಾಫರ್ಡ್ ಮಾರ್ಕೆಟ್ ಪ್ರದೇಶದಲ್ಲಿ ಪೊಲೀಸರು ಅಣಕು ಡ್ರಿಲ್ ನಡೆಸುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ದುರ್ಗಾ ಪೂಜೆ ಮತ್ತು ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತದೆ. ಈ ವೇಳೆ ಭಯೋತ್ಪಾದಕ ಬೆದರಿಕೆಗಳು ಇರುವುದರಿಂದ ಜನ ಎಚ್ಚರದಿಂದ ಇರಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ.
''ಕಟ್ಟೆಚ್ಚರದ ಭಾಗವಾಗಿ ಮುಂಬೈ ಪೊಲೀಸರು ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ. ಭದ್ರತೆಗಾಗಿ ಸುಧಾರಿತ ತಂತ್ರಜ್ಞಾನ ಬಳಸುತ್ತಿದ್ದಾರೆ. ಅಪರಾಧ ವಿಭಾಗ ಮತ್ತು ಪೊಲೀಸರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಹೀಗಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ನಾಗರಿಕರಿಗೆ ಪೊಲೀಸರು ಮನವಿ ಮಾಡಿದ್ದಾರೆ. ಹಬ್ಬ ಹರಿದಿನಗಳಲ್ಲಿ ಜನ ಕಿಕ್ಕಿರಿದು ತುಂಬಿರುತ್ತಾರೆ. ಅಕ್ಟೋಬರ್‌ನಿಂದ ನವರಾತ್ರಿ ಉತ್ಸವ ಪ್ರಾರಂಭವಾಗುತ್ತಿದೆ. ಈ ವೇಳೆ ಮುಂಬೈನ ಪ್ರತಿ ಕಟ್ಟಡದಲ್ಲೂ ಗರ್ಬಾ ಆಡಲಾಗುತ್ತದೆ. ಗರ್ಬಾ ಆಡಲು ದೊಡ್ಡ ಜನಸಮೂಹ ಸೇರುತ್ತದೆ. ಹಬ್ಬ ಹರಿದಿನಗಳಲ್ಲಿ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಗುಪ್ತಚರ ಸಂಸ್ಥೆ ಹೈ ಅಲರ್ಟ್ ನೀಡಿದೆ'' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
288 ಸದಸ್ಯ ಬಲದ ಮಹಾರಾಷ್ಟ್ರ ರಾಜ್ಯ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಸಂಬಂಧಿತ ಮೂಲಗಳು ಹೇಳುತ್ತವೆ. ಈ ಕ್ರಮದಲ್ಲಿ ಭಯೋತ್ಪಾದಕ ಬೆದರಿಕೆ ಎಚ್ಚರಿಕೆಗಳು ಸಾಕಷ್ಟು ಗೊಂದಲಕ್ಕೆ ಕಾರಣವಾಗಿವೆ.
ಓದಿ: ಭಯೋತ್ಪಾದಕ ಘಟಕ ಭೇದಿಸಿದ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಪೊಲೀಸರು; ಮದ್ದು ಗುಂಡುಗಳು ವಶಕ್ಕೆ - JK ENCOUNTER