ನವದೆಹಲಿ: ತಿರುಪತಿಯ ಪ್ರಸಾದದ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಬಳಸಲಾಗಿದೆ ಎಂಬ ಆರೋಪಗಳ ಬಗ್ಗೆ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಅಕ್ಟೋಬರ್ 4ಕ್ಕೆ ಮುಂದೂಡಿದೆ. ಕೇಂದ್ರದ ಎರಡನೇ ಅತ್ಯುನ್ನತ ಕಾನೂನು ಅಧಿಕಾರಿ ಸಾಲಿಸಿಟರ್ ಜನರಲ್ (ಎಸ್ಜಿ) ತುಷಾರ್ ಮೆಹ್ತಾ ಅವರ ಮನವಿಯ ಮೇರೆಗೆ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆಗೆ ಮುಂದೂಡಲು ನಿರ್ಧರಿಸಿತು.
"ನಾಳೆ ಬೆಳಗ್ಗೆ ಸರಿಯಾಗಿ 10.30ಕ್ಕೆ ನಾನು ವಾದ ಮುಂದುವರಿಸಲು ನ್ಯಾಯಾಲಯ ನನಗೆ ಅವಕಾಶ ನೀಡಬಹುದೇ" ಎಂದು ಮೆಹ್ತಾ, ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಮನವಿಯನ್ನು ಒಪ್ಪಿದ ನ್ಯಾಯಪೀಠ ಶುಕ್ರವಾರ ಈ ವಿಷಯವನ್ನು ಆಲಿಸುವುದಾಗಿ ಹೇಳಿತು.
ಸೆಪ್ಟೆಂಬರ್ 30ರಂದು ಈ ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ರಾಜ್ಯ ನೇಮಿಸಿದ ಎಸ್ಐಟಿ ತನಿಖೆ ಮುಂದುವರಿಯಬೇಕೇ ಅಥವಾ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಬೇಕೇ ಎಂಬುದನ್ನು ನಿರ್ಧರಿಸಲು ಸಹಾಯ ಮಾಡುವಂತೆ ಮೆಹ್ತಾ ಅವರಿಗೆ ಸೂಚಿಸಿತ್ತು. ಈ ವಿಷಯದ ಯೋಚಿಸುವಂತೆ ಮತ್ತು ಈ ನಿಟ್ಟಿನಲ್ಲಿ ಸಹಾಯ ಮಾಡುವಂತೆ ನ್ಯಾಯಾಲಯ ತುಷಾರ್ ಮೆಹ್ತಾರಿಗೆ ಕೇಳಿತ್ತು.
ದೇವರನ್ನು ರಾಜಕೀಯದಿಂದ ದೂರವಿಡಿ: ದೇವರಿಗೆ ಸಂಬಂಧಿಸಿದ ವಿಚಾರಗಳನ್ನು ರಾಜಕೀಯದಿಂದ ದೂರವಿಡಬೇಕೆಂದು ಅಂದಿನ ವಿಚಾರಣೆಯಲ್ಲಿ ಸುಪ್ರೀಂ ಕೋರ್ಟ್ ಹೇಳಿತ್ತು. ಹಿಂದಿನ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತದಲ್ಲಿ ತಿರುಪತಿ ಲಡ್ಡು ತಯಾರಿಸಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಹೇಳಿಕೆಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿತ್ತು.
ಆಂಧ್ರ ಪ್ರದೇಶದಲ್ಲಿ ಹಿಂದಿನ ವೈಎಸ್ಆರ್ಸಿಪಿ ಆಡಳಿತದ ಅವಧಿಯಲ್ಲಿ ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬುದನ್ನು ಮೇಲ್ನೋಟಕ್ಕೆ ಸಾಬೀತುಪಡಿಸುವಂಥ ಯಾವುದೇ ಪುರಾವೆ ಕಾಣಿಸುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ನಡೆದ ಮೊದಲ ವಿಚಾರಣೆಯಲ್ಲಿ ಅಭಿಪ್ರಾಯಪಟ್ಟಿದೆ.
"ಉನ್ನತ ಸಾಂವಿಧಾನಿಕ ಹುದ್ದೆಯಲ್ಲಿರುವವರು ಸಾರ್ವಜನಿಕವಾಗಿ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ನಾವು ಮೇಲ್ನೋಟಕ್ಕೆ ಭಾವಿಸುತ್ತೇವೆ ಮತ್ತು ಲಡ್ಡು ತಯಾರಿಸಲು ಕಲಬೆರಕೆ ತುಪ್ಪವನ್ನು ಬಳಸಲಾಗಿದೆಯೇ ಎಂಬುದನ್ನು ಪತ್ತೆ ಮಾಡಲು ತನಿಖೆ ನಡೆಯುತ್ತಿದೆ" ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ಆದೇಶಿಸಿದ ನಂತರ ಮುಖ್ಯಮಂತ್ರಿಗಳು ಸಾರ್ವಜನಿಕ ಹೇಳಿಕೆ ನೀಡಬಾರದಿತ್ತು ಎಂದು ಅದು ಅಭಿಪ್ರಾಯಪಟ್ಟಿತ್ತು.
ಇದನ್ನೂ ಓದಿ: ಬಾಲಾಪರಾಧಿ ವಯಸ್ಸು 14ಕ್ಕಿಳಿಸಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸಲಹೆ - Juvenile Age