ಮುಂಬೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಪತ್ನಿ ಸಮೇತರಾಗಿ ಇಂದು ಇಲ್ಲಿನ ಪ್ರಸಿದ್ಧ ಲಾಲ್ಭಾಗ್ ಚಾ ರಾಜಾದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶ ಮೂರ್ತಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.
ಇದಕ್ಕೂ ಮುನ್ನ ಶಾ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ 'ವರ್ಷ' ಮನೆಗೆ ಭೇಟಿ ನೀಡಿದರು. ಇದೇ ವೇಳೆ ಅವರು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನೂ ಅವರ ಮನೆಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಎರಡು ದಿನಗಳ ಕಾಲ ಮಹಾರಾಷ್ಟ್ರ ಪ್ರವಾಸದಲ್ಲಿರುವ ಅಮಿತ್ ಶಾ ನಡೆಗೆ ಈ ಮೊದಲು ಶಿವಸೇನಾ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಆಕ್ಷೇಪ ವ್ಯಕ್ತಪಡಿಸಿದ್ದರು. ಮುಂಬೈನ ಅಸ್ಮಿತೆ ಮತ್ತು ಹಿತಾಸಕ್ತಿಗಳನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಸೀಟು ಹಂಚಿಕೆ ಮಾತುಕತೆ: ನವೆಂಬರ್ನಲ್ಲಿ ವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಮಹಾರಾಷ್ಟ್ರದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ರಾಜ್ಯಕ್ಕೆ ಆಗಮಿಸಿರುವ ಅಮಿತ್ ಶಾ ಮುಂಬರುವ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಮೈತ್ರಿ ಪಕ್ಷಗಳೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಭಾನುವಾರ ತಡರಾತ್ರಿ ಶಾ, ರಾಜ್ಯ ಬಿಜೆಪಿ ನಾಯಕರು, ಡಿಸಿಎಂ ಫಡ್ನವೀಸ್, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ಮತ್ತು ಪಕ್ಷದ ಮುಂಬೈ ಉಸ್ತುವಾರಿ ಆಶಿಶ್ ಶೇಲಾರ್ ಇತರರೊಂದಿಗೆ ಸಭೆ ನಡೆಸಿದ್ದಾರೆ.
ಇದೇ ವೇಳೆ ಅವರು ಮಹಾಯುತಿ ಮೈತ್ರಿ ಪಾಳಯದ ಪಕ್ಷಗಳ ಮುಖ್ಯಸ್ಥರಾದ ಮುಖ್ಯಮಂತ್ರಿ ಮತ್ತು ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ, ಎನ್ಸಿಪಿ ಅಧ್ಯಕ್ಷ ಅಜಿತ್ ಪವರ್ ಜೊತೆ ಸೀಟು ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರ ಫಲಿತಾಂಶ ಬಿಜೆಪಿಗೆ ಬೇಸರ ಮೂಡಿಸಿತ್ತು. ಇದರ ಬೆನ್ನಲ್ಲೇ 288 ಕ್ಷೇತ್ರಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಮಹಾರಾಷ್ಟ್ರದಲ್ಲಿ ಬಿಜೆಪಿ 150 ಕ್ಷೇತ್ರದಲ್ಲಿ ಸ್ಪರ್ಧಿಸುವ ನಿರೀಕ್ಷೆ ಇದೆ.
ಮಾಲ್ವಾನ್ ಪ್ರಕರಣ ಪರಿಶೀಲನೆ: ಈ ನಡುವೆ ಬದ್ಲಾಪುರದಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ನಡೆದ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಕೇಂದ್ರ ಸಚಿವರು ಪರಿಶೀಲನೆ ನಡೆಸಿದರು. ಮಾಲ್ವಾನ್ನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಕುಸಿತ ಸ್ಥಳಕ್ಕೂ ಭೇಟಿ ನೀಡಿ ಪುನರ್‌ನಿರ್ಮಾಣದ ಕುರಿತು ಪರಿಶೀಲಿಸಿದ್ದಾರೆ.
ಇದನ್ನೂ ಓದಿ: 2,200 ಕೋಟಿ ರೂ. ಟ್ರೇಡಿಂಗ್ ಹಗರಣ: ನಟಿ ಸುಮಿ ಬೋರಾ ಖಾತೆಗೆ 20 ಕೋಟಿ ರೂ. ವರ್ಗಾವಣೆ ಆರೋಪ