ಕನ್ನಡ ಚಿತ್ರರಂಗದಲ್ಲಿ ಸಂಚಲನ ಸೃಷ್ಟಿಸಿದ 'ಅಪ್ಪಾ ಐ ಲವ್ ಯು ಪಾ' ಎಂಬ ಹಾಡು ಯಾರು ಕೇಳಿಲ್ಲ? ಈ ಹಾಡಿನ ಪದವೇ ಈಗ ಸಿನಿಮಾ ಟೈಟಲ್ ಆಗಿದೆ. ಹೌದು, 'ಅಪ್ಪಾ ಐ ಲವ್ ಯೂ' ಎಂದು ಹೆಸರಿಡಲಾಗಿದ್ದು ಲವ್ಲಿ ಸ್ಟಾರ್ ಪ್ರೇಮ್ ಹಾಗೂ ಟಗರು ಪುಟ್ಟಿ ಖ್ಯಾತಿಯ ಮಾನ್ವಿತ್ ಕಾಮತ್ ಮೊದಲ ಬಾರಿಗೆ ಜೋಡಿಯಾಗಿ ನಟಿಸುತ್ತಿರುವ ಚಿತ್ರ ಇದಾಗಿದೆ. ತಬಲಾ ನಾಣಿ ಮುಖ್ಯಭೂಮಿಕೆಯಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಸಾಥ್ ಕೂಡ ಸಿಕ್ಕಿದೆ. ಚಿತ್ರದ ಶೀರ್ಷಿಕೆ ಹಾಗೂ ಪೋಸ್ಟರ್ ಅನಾವರಣ ಮಾಡಿದ ಆ್ಯಕ್ಷನ್ ಪ್ರಿನ್ಸ್, ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.
'ಜೂಟಾಟ' ಸಿನಿಮಾ ಬಿಡುಗಡೆಗೆ ಎದುರು ನೋಡುತ್ತಿರುವ ಅಥರ್ವ್ ಆರ್ಯ 'ಅಪ್ಪಾ ಐ ಲವ್ ಯೂ' ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಇದು ಇವರ ಎರಡನೇ ಪ್ರಯತ್ನ. ಟೈಟಲ್ ಹೇಳುವಂತೆ ಇದು ತಂದೆಯ ಮಹತ್ವ ಸಾರುವ ಸಿನಿಮಾ. ಕುಟುಂಬದಲ್ಲಿ ಅಥವಾ ಸಮಾಜದಲ್ಲಿ ತಂದೆ ಕಡೆಗಣನೆಗೆ ಒಳಗಾದಾಗ ಯಾವ ರೀತಿ ನೋವು ಅನುಭವಿಸುತ್ತಾನೆ ಎಂಬುದೇ ಕಥೆಯ ತಿರುಳು. ಇಲ್ಲಿ ತಂದೆಯಾಗಿ ತಬಲಾ ನಾಣಿ ಬಣ್ಣ ಹಚ್ಚಿದ್ದು, ರಂಗಭೂಮಿ ಕಲಾವಿದರಾದ ಸಂಜಯ್ ಹಾಗೂ ಜೀವಿತ ವಸಿಷ್ಠ ಚಿತ್ರರಂಗಕ್ಕೆ ಪರಿಚಿತರಾಗುತ್ತಿದ್ದಾರೆ.
ಪ್ರೇಮ್ ಹಾಗೂ ಮಾನ್ವಿತಾ ಕಾಮತ್ ಜೊತೆಗೆ ಸಂಜಯ್, ಜೀವಿತಾ, ರಂಗೀತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವು ತಾರಾಬಳಗ ಚಿತ್ರದಲ್ಲಿದೆ.
'ಅಪ್ಪಾ ಐ ಲವ್ ಯೂ' ಸಿನಿಮಾಗೆ ನಾಗಾರ್ಜುನ್ ಆರ್ ಡಿ ಛಾಯಾಗ್ರಹಣ, ವೇಧಿಕ್ ವೀರ ಸಂಕಲನ, ಗಂಗಮ್ ರಾಜು ಕೊರಿಯೋಗ್ರಫಿ ಚಿತ್ರಕ್ಕಿದೆ. ಆಕಾಶ್ ಪರ್ವ ಸಂಗೀತ ನಿರ್ದೇಶನದ ಹಾಡುಗಳಿಗೆ ಡಾ.ನಾಗೇಂದ್ರ ಪ್ರಸಾದ್, ಕವಿರಾಜ್, ಕೆ. ಕಲ್ಯಾಣ್, ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದಾರೆ. K.R.S ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಬೆಂಗಳೂರು, ಮೈಸೂರು, ಮಂಗಳೂರು ಸುತ್ತಮುತ್ತ 65 ದಿನಗಳ ಕಾಲ ಶೂಟಿಂಗ್ ನಡೆಸಲಾಗಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.
ಇದನ್ನೂ ಓದಿ: ವಿನಯ್ ರಾಜ್ಕುಮಾರ್ ನಟನೆಯ 'ಒಂದು ಸರಳ ಪ್ರೇಮಕಥೆ'ಗೆ ಗೋಲ್ಡನ್ ಸ್ಟಾರ್ ಸಾಥ್