'ಆಕಾಶ್', 'ಅರಸು', 'ಮೆರವಣಿಗೆ'ಯಂತಹ ಹಿಟ್ ಸಿನಿಮಾಗಳ ನಿರ್ದೇಶಕ ಮಹೇಶ್ ಬಾಬು ಹೊಸ ಸಿನಿಮಾ ಕೈಗೆತ್ತಿಕೊಂಡಿರುವುದು ನಿಮಗೆ ತಿಳಿದಿರುವ ಸಂಗತಿ. ಪ್ರತೀ ಸಿನಿಮಾದಲ್ಲಿಯೂ ಹೊಸ ಪ್ರತಿಭೆಗಳನ್ನು ಪರಿಚಯಿಸುವ ಅವರೀಗ, ಈ ಚಿತ್ರದ ಮೂಲಕ ಕಿರುತೆರೆಯ ಪ್ರತಿಭಾನ್ವಿತ ನಟರಲ್ಲಿ ಒಬ್ಬರಾದ ಸ್ಮೈಲ್ ಗುರು ರಕ್ಷಿತ್ ಅವರನ್ನು ನಾಯಕನಾಗಿ ಕನ್ನಡ ಬೆಳ್ಳಿಪರದೆಗೆ ಕರೆದುಕೊಂಡು ಬರುತ್ತಿದ್ದಾರೆ. ಮಹೇಶ್ ಬಾಬು ಹಾಗೂ ರಕ್ಷಿತ್ ಜೋಡಿಯ ಹೊಸ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಬೆಂಗಳೂರಿನ ಅಭಯ ಹಸ್ತ ಬಲಮುರಿ ದೇಗುಲದಲ್ಲಿ ಮುಹೂರ್ತ ಸಮಾರಂಭ ನೆರವೇರಿದೆ.
ಮಹೇಶ್ ಬಾಬು ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದ ಶೀರ್ಷಿಕೆ ಏನೆಂಬುದು ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು 'ಪ್ರೊಡಕ್ಷನ್ ನಂ. 2' ಎಂದು ಕರೆಯಲಾಗುತ್ತಿದೆ. ನೆನಪಿರಲಿ ಪ್ರೇಮ್ ಈ ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಸಿನಿಮಾದ ಮೊದಲ ದೃಶ್ಯಕ್ಕೆ ಅವರು ಆರಂಭ ಫಲಕ ತೋರಿ, ಬಳಿಕ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಎ ಕ್ಲಾಸ್ ಸಿನಿ ಫಿಲ್ಮ್ಸ್ ಪ್ರೊಡಕ್ಷನ್ ಸಂಸ್ಥಾಪಕ ಅನುರಾಗ್ ಆರ್ ತಾಯಿ ಕ್ಯಾಮರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಈ ಸಿನಿಮಾದಲ್ಲಿ ಸ್ಮೈಲ್ ಗುರು ರಕ್ಷಿತ್ ಅವರಿಗೆ ಜೋಡಿಯಾಗಿ 'ವೀರ ಮದಕರಿ'ಯಲ್ಲಿ ಬಾಲನಟಿಯಾಗಿ ಅಭಿನಯಿಸಿದ್ದ ಜೆರುಶಾ ಕಾಣಿಸಿಕೊಳ್ಳಲಿದ್ದಾರೆ. ಮತ್ತೋರ್ವ ನಾಯಕಿಯನ್ನು ಚಿತ್ರತಂಡ ಶೀಘ್ರದಲ್ಲೇ ರಿವೀಲ್ ಮಾಡಲಿದೆ.
ಇದನ್ನೂ ಓದಿ: ಸ್ಯಾಂಡಲ್ವುಡ್ನ ಕಾಮಿಡಿ ಸ್ಟಾರ್ ಈಗ ಖಡಕ್ ವಿಲನ್: ಈ ನಟನನ್ನು ಗುರುತಿಸುವಿರೇ? - Villain role Photoshoot
ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಸಿನಿಮಾ ಕೊಡಬೇಕು ಎಂಬ ಉದ್ದೇಶದಿಂದ ಎಂಎಂಎಂ ಪಿಕ್ಚರ್ಸ್ ಹಾಗೂ ಎ ಕ್ಲಾಸ್ ಸಿನಿ ಫಿಲ್ಮಂಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ನಿರ್ಮಾಣ ಸಂಸ್ಥೆಯಡಿ ಅನುರಾಗ್ ಆರ್ ಹಾಗೂ ಮಿಥುನ್ ಕೆ.ಎಸ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ವಿಭಿನ್ನ ಪ್ರೇಮಕಥೆಯ 'ಕಡಲೂರ ಕಣ್ಮಣಿ' ಟ್ರೇಲರ್ ಅನಾವರಣ - Kadaloora Kanmani Trailer
ಅನೂಪ್ ಸೀಳಿನ್ ಸಂಗೀತ ನಿರ್ದೇಶನ ಮಾಡುತ್ತಿದ್ದರೆ, ಸತ್ಯ ಅವರು ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ಸತೀಶ್ ಚಂದ್ರಯ್ಯ ಅವರ ಸಂಕಲನ ಈ ಚಿತ್ರಕ್ಕಿರಲಿದೆ. ನಾಯಕ ಸ್ಮೈಲ್ ಗುರು ರಕ್ಷಿತ್ ಕಥೆ ಬರೆದಿದ್ದು, ವಿಜಯ್ ಈಶ್ವರ್ ಸಂಭಾಷಣೆ ಒದಗಿಸಲಿದ್ದಾರೆ. ಶೀಘ್ರದಲ್ಲಿಯೇ ಚಿತ್ರತಂಡ ಅದ್ಧೂರಿಯಾಗಿ ಟೈಟಲ್ ರಿವೀಲ್ ಮಾಡುವ ಯೋಜನೆ ಹಾಕಿಕೊಂಡಿದೆ. ಮೊದಲ ಹಂತದ ಚಿತ್ರೀಕರಣವನ್ನು ಬೆಂಗಳೂರಿನಲ್ಲಿ ನಡೆಸಲಿರುವ ಚಿತ್ರತಂಡ, ಎರಡನೇ ಹಂತದ ಶೂಟಿಂಗ್ಗಾಗಿ ಮಲೆನಾಡಿನತ್ತ ಹೆಜ್ಜೆ ಹಾಕಲಿದೆ.