ನ್ಯೂಯಾರ್ಕ್(ಅಮೆರಿಕ): ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾಗಿ ಗಾಜಾ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸಲು ಭಾರತದ ಬೆಂಬಲವನ್ನು ಅವರು ಪುನರುಚ್ಚರಿಸಿದರು.
ಮೂರು ದಿನಗಳ ಅಮೆರಿಕ ಪ್ರವಾಸದಲ್ಲಿರುವ ಮೋದಿ ನ್ಯೂಯಾರ್ಕ್‌ನಲ್ಲಿ ಭಾನುವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನೇಪಥ್ಯದಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷರೂ ಸೇರಿದಂತೆ ಜಾಗತಿಕ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
Met President Mahmoud Abbas in New York. Reiterated India’s support for early restoration of peace and stability in the region. Exchanged views of further strengthening long standing friendship with the people of Palestine. pic.twitter.com/LnmAm7dDax
— Narendra Modi (@narendramodi) September 23, 2024
ಈ ಬಗ್ಗೆ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಅವರು, 'ನ್ಯೂಯಾರ್ಕ್‌ನಲ್ಲಿ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾದೆ. ಗಾಜಾದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು ಭಾರತದ ಬೆಂಬಲ ನೀಡಲಿದೆ. ಪ್ಯಾಲೆಸ್ತೀನ್ ಜನರೊಂದಿಗೆ ದೀರ್ಘಕಾಲೀನ ಸ್ನೇಹವನ್ನು ಮತ್ತಷ್ಟು ಬಲಪಡಿಸುವ ವಿಚಾರಗಳನ್ನು ವಿನಿಮಯ ಮಾಡಿಕೊಂಡೆ" ಎಂದು ತಿಳಿಸಿದ್ದಾರೆ.
'ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರನ್ನು ಭೇಟಿಯಾದರು' ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಡೆಲವೇರ್‌ನ ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿ ಶನಿವಾರ ನ್ಯೂಯಾರ್ಕ್‌ಗೆ ಆಗಮಿಸಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಭಾನುವಾರ ಮಧ್ಯಾಹ್ನ ಲಾಂಗ್ ಐಲ್ಯಾಂಡ್‌ನಲ್ಲಿ ನಡೆದ ಬೃಹತ್ ಕಾರ್ಯಕ್ರಮದಲ್ಲಿ ಮೋದಿ, ಭಾರತೀಯ-ಅಮೆರಿಕನ್ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು. ಆ ಬಳಿಕ ದುಂಡುಮೇಜಿನ ಸಮ್ಮೇಳನದಲ್ಲಿ ಅವರು ಅಮೆರಿಕದ ದಿಗ್ಗಜ ಟೆಕ್ ನಾಯಕರು ಮತ್ತು ಸಿಇಒಗಳೊಂದಿಗೆ ಸಂವಾದ ನಡೆಸಿದರು. ನಂತರ, ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದರು.
ಇಸ್ರೇಲಿ ಮಿಲಿಟರಿ ನೀಡಿದ ಮಾಹಿತಿ ಪ್ರಕಾರ, ಕಳೆದ ವರ್ಷದ ಅಕ್ಟೋಬರ್ 7ರಂದು ಹಮಾಸ್ ಸಂಘಟನೆ ಇಸ್ರೇಲ್ ಮೇಲೆ ನಡೆಸಿದ ಭೀಕರ ದಾಳಿಯಲ್ಲಿ 1,542ಕ್ಕೂ ಹೆಚ್ಚು ಇಸ್ರೇಲಿಗಳು ಮತ್ತು ವಿದೇಶಿ ಪ್ರಜೆಗಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಅಮೆರಿಕದ ಪ್ರಮುಖ ಟೆಕ್ ಕಂಪನಿಗಳ ಸಿಇಒಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ - Modi Attends Tech CEO Round Table