ನವದೆಹಲಿ: ಟಿ-20 ವಿಶ್ವಕಪ್‌ಗೆ ಭಾರತ ತಂಡವನ್ನು ಮಂಗಳವಾರ ಪ್ರಕಟಿಸಲಾಗಿದೆ. ಚೇಸಿಂಗ್ ಮಾಸ್ಟರ್ ವಿರಾಟ್ ಕೊಹ್ಲಿ, ಯಜುವೇಂದ್ರ ಚಹಲ್, ಅಪಘಾತಕ್ಕೀಡಾಗಿ ವರ್ಷದ ಬಳಿಕ ಕ್ರಿಕೆಟ್ ಮೈದಾನಕ್ಕಿಳಿದ ರಿಷಬ್ ಪಂತ್ ಸ್ಥಾನ ಪಡೆದಿದ್ದರೆ, ಕನ್ನಡಿಗ ಕೆ.ಎಲ್.ರಾಹುಲ್ ಅವಕಾಶ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ರೋಹಿತ್ ಶರ್ಮಾಗೆ ನಾಯಕತ್ವ ಪಟ್ಟ ನೀಡಿದ್ದರೆ, ಹಾರ್ದಿಕ್ ಪಾಂಡ್ಯ ಉಪ ನಾಯಕರಾಗಿದ್ದಾರೆ.
ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಮಂಗಳವಾರ ನಡೆದ ತಂಡದ ಆಯ್ಕೆಯಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಭಾಗಿಯಾಗಿದ್ದರು. ಸ್ಟ್ರೈಕ್ರೇಟ್ ಬಗ್ಗೆ ಅಪಸ್ವರ ಕೇಳಿಬಂದರೂ, ಹಿರಿಯ ಆಟಗಾರ ವಿರಾಟ್ ಕೊಹ್ಲಿಯನ್ನು ತಂಡದಲ್ಲಿ ಸೇರಿಸಿಕೊಳ್ಳಲಾಗಿದೆ. ಇಬ್ಬರು ವಿಕೆಟ್ ಕೀಪರ್‌ಗಳಾಗಿ ರಿಷಬ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಇರಲಿದ್ದಾರೆ.
ರೋಹಿತ್ ಕ್ಯಾಪ್ಟನ್ : ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ ಕಳೆದುಕೊಂಡ ನಿರಾಸೆಯಲ್ಲಿರುವ ರೋಹಿತ್ ಶರ್ಮಾಗೆ ಟಿ20 ತಂಡದ ನಾಯಕತ್ವ ನೀಡಲಾಗಿದೆ. ಹಲವು ಸರಣಿಗಳಿಗೆ ಕ್ಯಾಪ್ಟನ್ ಆಗಿದ್ದ ಹಾರ್ದಿಕ್ ಪಾಂಡ್ಯ ಉಪ ನಾಯಕರಾಗಿದ್ದಾರೆ. ಯುವ ಆಟಗಾರ, ಡ್ಯಾಶಿಂಗ್ ಓಪನರ್ ಯಶಸ್ವಿ ಜೈಸ್ವಾಲ್ರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಟಿ20 ನಂಬರ್ 1 ಬ್ಯಾಟರ್ ಸೂರ್ಯಕುಮಾರ್ ಯಾದವ್ ಸ್ಥಾನ ಅಬಾಧಿತವಾಗಿದೆ.
ಆಲ್ರೌಂಡರ್ಗಳ ಸಾಲಿನಲ್ಲಿ ಹಾರ್ದಿಕ್ ಪಾಂಡ್ಯ, ಮೊದಲ ಸಲ ವಿಶ್ವಕಪ್ ಆಡುತ್ತಿರುವ ಶಿವಂ ದುಬೆ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಇರಲಿದ್ದಾರೆ. 'ಕುಲ್ಚಾ' ಜೋಡಿ ಖ್ಯಾತಿಯ ಕುಲದೀಪ್ ಯಾದವ್, ಯಜುವೇಂದ್ರ ಚಹಲ್ ಮತ್ತೆ ಒಂದಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ವೇಗದ ಪಡೆಯ ನೇತೃತ್ವ ವಹಿಸಿದರೆ, ಮೊಹಮದ್ ಸಿರಾಜ್, ಅರ್ಷದೀಪ್ ಸಿಂಗ್ ಸಾಥ್ ನೀಡಲಿದ್ದಾರೆ. ಭಾರತ ತಂಡದ ಸೆನ್ಸೇಷನ್ಗಳಾದ ಶುಭ್ಮನ್ ಗಿಲ್, ರಿಂಕು ಸಿಂಗ್ ಮೀಸಲು ತಂಡದಲ್ಲಿದ್ದಾರೆ.
ಕನ್ನಡಿಗ ಕೆ.ಎಲ್.ರಾಹುಲ್ಗೆ ನಿರಾಸೆ: ಉತ್ತಮ ಲಯದಲ್ಲಿದ್ದರೂ ಕನ್ನಡಿಗ ಕೆ.ಎಲ್.ರಾಹುಲ್ಗೆ ತಂಡದಲ್ಲಿ ಅವಕಾಶ ಸಿಕ್ಕಿಲ್ಲ. ಐಪಿಎಲ್ನಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ರಾಹುಲ್ 350ಕ್ಕೂ ಅಧಿಕ ರನ್ ಕಲೆ ಹಾಕಿ ಮುಂಚೂಣಿಯಲ್ಲಿದ್ದರು. ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ವೆಂಕಟೇಶ್ ಅಯ್ಯರ್, ರವಿ ಬಿಷ್ಣೋಯಿ ಸೇರಿದಂತೆ ಹಲವು ಯುವ ಆಟಗಾರರೂ ಅವಕಾಶದ ನಿರೀಕ್ಷೆಯಲ್ಲಿದ್ದರು.
ವಿಶ್ವಕಪ್‌ಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಮೀಸಲು ಆಟಗಾರರು: ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.