ನವದೆಹಲಿ: ಭಾರತೀಯ ಯುವ ಬ್ಯಾಟರ್ ಸರ್ಫರಾಜ್ ಖಾನ್ ಮತ್ತು ವಿಕೆಟ್ ಕೀಪರ್ ಧ್ರುವ್ ಜುರೆಲ್ ಅವರನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತನ್ನ ವಾರ್ಷಿಕ ಒಪ್ಪಂದದ ಪಟ್ಟಿಗೆ ಹೊಸದಾಗಿ ಸೇರಿಸಿಕೊಂಡಿದೆ.
ಪ್ರಸಕ್ತ ಋತುವಿನಲ್ಲಿ ಈ ಇಬ್ಬರು ಮೂರು ಟೆಸ್ಟ್ ಪಂದ್ಯಗಳನ್ನು ಆಡುವ ಮೂಲಕ ಬಿಸಿಸಿಐ ಮಾನದಂಡವನ್ನು ಪೂರೈಸಿದ್ದಾರೆ. ಸೋಮವಾರ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಇಬ್ಬರನ್ನು ಸಿ ಶ್ರೇಣಿ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳಲಾಗಿದೆ.
ಇತ್ತೀಚೆಗೆ ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಸರ್ಫರಾಜ್ ಖಾನ್ 3 ಅರ್ಧಶತಕಗಳ ಇನ್ನಿಂಗ್ಸ್ ಆಡಿದ್ದರು. ರಾಂಚಿ ಟೆಸ್ಟ್ ಪಂದ್ಯದಲ್ಲಿ ಧ್ರುವ್ ಜುರೆಲ್ 90 ಮತ್ತು ಅಜೇಯ 39 ರನ್ಗಳ ಇನ್ನಿಂಗ್ಸ್ ಆಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.
2023-24ರ ವಾರ್ಷಿಕ ಗುತ್ತಿಗೆ ಪಟ್ಟಿ:
ಗ್ರೇಡ್ A+ (4 ಆಟಗಾರರು): ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ.
ಗ್ರೇಡ್ ಎ (6 ಆಟಗಾರರು): ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕೆ.ಎಲ್.ರಾಹುಲ್, ಶುಭಮನ್ ಗಿಲ್ ಮತ್ತು ಹಾರ್ದಿಕ್ ಪಾಂಡ್ಯ.
ಗ್ರೇಡ್ ಬಿ (5 ಆಟಗಾರರು): ಸೂರ್ಯ ಕುಮಾರ್ ಯಾದವ್, ರಿಷಭ್ ಪಂತ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ಯಶಸ್ವಿ ಜೈಸ್ವಾಲ್.
ಗ್ರೇಡ್ ಸಿ (15 ಆಟಗಾರರು): ರಿಂಕು ಸಿಂಗ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಶಾರ್ದೂಲ್ ಠಾಕೂರ್, ಶಿವಂ ದುಬೆ, ರವಿ ಬಿಷ್ಣೋಯ್, ಜಿತೇಶ್ ಶರ್ಮಾ, ವಾಷಿಂಗ್ಟನ್ ಸುಂದರ್, ಮುಖೇಶ್ ಕುಮಾರ್, ಸಂಜು ಸ್ಯಾಮ್ಸನ್, ಅರ್ಷದೀಪ್ ಸಿಂಗ್, ಕೆ.ಎಸ್.ಭರತ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್ ಮತ್ತು ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಧ್ರುವ್ ಜುರೆಲ್.
ದೇಶೀಯ ಕ್ರಿಕೆಟ್‌ನಲ್ಲಿ ಆಡದ ಕಾರಣ ಬಿಸಿಸಿಐ ತನ್ನ ವಾರ್ಷಿಕ ಒಪ್ಪಂದದ ಪಟ್ಟಿಯಿಂದ ಶ್ರೇಯಸ್ ಅಯ್ಯರ್ ಮತ್ತು ಇಶಾನ್ ಕಿಶನ್ ಅವರನ್ನು ಕಳೆದ ತಿಂಗಳು ಕೈಬಿಟ್ಟಿತ್ತು.
ಇದನ್ನೂ ಓದಿ: ಒಂದು ವರ್ಷದ ಸಿದ್ಧತೆ, ಆಟಗಾರರ ಬದ್ಧತೆ ಆರ್‌ಸಿಬಿ ಯಶಸ್ಸಿಗೆ ಕಾರಣ: ಸ್ಮೃತಿ ಮಂಧಾನ