ತುಮಕೂರು: "ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೇ ಪೂರಕವಾಗಿ ಜಿಲ್ಲೆಯಲ್ಲಿ 19 ಮಂದಿಯನ್ನು ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.
"ಇದುವರೆಗೂ 50 ಮಂದಿಯನ್ನು ಗಡಿಪಾರು ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಅವರು ಇರುವಂತಹ ಪ್ರದೇಶಗಳಲ್ಲಿ ಶಾಂತಿಯುತ ಮತದಾನಕ್ಕೆ ಅಡ್ಡಿ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿದರು.
"ಗಡಿಪಾರು ಮಾಡಲಾಗಿರುವಂತಹ ವ್ಯಕ್ತಿಗಳ ಕುರಿತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುತ್ತಾರೆ. ಅಕಸ್ಮಾತ್ ಅವರು ವಾಪಸ್ ಆ ಸ್ಥಳಗಳಿಗೆ ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಮಂಗಳೂರು: ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾ ಕಾಯ್ದೆ, 13 ಮಂದಿ ಗಡಿಪಾರು - Rowdies Booked Under Goonda Act