ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಐದು ಜಿಲ್ಲೆಗಳಿಗೆ ಇಂದಿನಿಂದ ನಾಲ್ಕು ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಳಗಾವಿ, ಉತ್ತರ, ದಕ್ಷಿಣ ಒಳನಾಡಿನಲ್ಲಿ ಹಗುರ ಮಳೆಯಾಗಲಿದ್ದು, ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.