ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಅದ್ದೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಇಂದು ಪೂರ್ವಭಾವಿ ಸಭೆ ಜರುಗಿತು. ಜಿಲ್ಲಾಡಳಿತದ ಸಹಕಾರದೊಂದಿಗೆ ಸಮ್ಮೇಳನ ಆಯೋಜಿಸುವಂತೆ ಸಲಹೆ ನೀಡಿದ ಮುಖ್ಯಮಂತ್ರಿಗಳು ಕನ್ನಡ ಸಂಘಟನೆಗಳನ್ನೂ ವಿಶ್ವಾಸಕ್ಕೆ ಪಡೆಯಲು ಸೂಚಿಸಿದರು.
ಜೂನ್ ಮೊದಲನೇ ವಾರದಲ್ಲಿ ಸಮ್ಮೇಳನ ಆಯೋಜಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೆಲಸ ಮಾಡಿದವರನ್ನು ಪರಿಗಣಿಸಲು ಮುಖ್ಯಮಂತ್ರಿಗಳು ಸೂಚಿಸಿದರು. ಕನ್ನಡರಥ ಜಾಥಾ, 87 ಜನ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸೇರಿದಂತೆ ಮೂರು ದಿನಗಳ ಕಾಲ ಕನ್ನಡ ವಿಚಾರ ಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸಭೆಗೆ ತಿಳಿಸಿದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 30 ಕೋಟಿ ರೂ.ಗಳ ಅನುದಾನ ಒದಗಿಸಲು ಪರಿಷತ್ ಅಧ್ಯಕ್ಷರು ಮನವಿ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಚಲುವನಾರಾಯಣಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಶಾಸಕ ಪಿ.ಎಂ ನರೇಂದ್ರಸ್ವಾಮಿ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.
ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಮಂಡ್ಯ ಆತಿಥ್ಯ ವಹಿಸಿಕೊಂಡಿದೆ. ಈ ಕುರಿತಂತೆ ಕ.ಸಾ.ಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಕಳೆದ ಜೂನ್ನಲ್ಲಿ 'ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ' ಎಂದು ಪ್ರಕಟಿಸಿದ್ದರು.
87ನೇ ಕನ್ನಡ ಸಾಹಿತ್ಯ ಸಮ್ಮಳನ ಆತಿಥ್ಯಕ್ಕಾಗಿ ಒಂಬತ್ತು ಜಿಲ್ಲೆಗಳಿಂದ ಮನವಿ ಸಲ್ಲಿಸಲಾಗಿತ್ತು. ಬೆಂಗಳೂರು ಗ್ರಾಮಾಂತರ, ಮಂಡ್ಯ, ಚಿಕ್ಕಮಗಳೂರು, ಉತ್ತರಕನ್ನಡ, ರಾಮನಗರ, ಬಳ್ಳಾರಿ ಮತ್ತು ಬೆಳಗಾವಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಂದ ಮನವಿ ಬಂದಿದ್ದವು. ಅದರಲ್ಲಿ ಮನವಿಯನ್ನು ಹಿಂತೆಗೆದುಕೊಳ್ಳಲು ಅವಕಾಶ ನೀಡಿದಾಗ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ರಾಮನಗರ ಕೋಲಾರ ಮತ್ತು ಚಿಕ್ಕಬಳ್ಳಾಪುರದವರು ಮನವಿ ವಾಪಸ್ ಪಡೆದಿದ್ದವು. ಕೊನೆಯಲ್ಲಿ ಮಂಡ್ಯ, ಚಿಕ್ಕಮಗಳೂರು, ಉತ್ತಕನ್ನಡ ಮತ್ತು ಬಳ್ಳಾರಿ ನಡುವೆ ಚುನಾವಣೆ ನಡೆಯಿತು. ಒಟ್ಟು 54 ಜನರು ಪಾಲ್ಗೊಳ್ಳಬೇಕಾದ ಸಭೆಯಲ್ಲಿ 46 ಜನ ಪಾಲ್ಗೊಂಡಿದ್ದರು. ನಾಲ್ಕು ಜಿಲ್ಲೆಗಳಿಗೆ ಚುನಾವಣೆ ನಡೆದು ಅಂತಿಮವಾಗಿ 17 ಮತಗಳನ್ನು ಪಡೆಯುವ ಮೂಲಕ ಮಂಡ್ಯ ಜಿಲ್ಲೆಗೆ ಆತಿಥ್ಯ ಒಲಿದಿತ್ತು.
ಇದನ್ನೂ ಓದಿ: ಫಕೀರ ಸಿದ್ಧರಾಮ ಸ್ವಾಮೀಜಿ ಅಮೃತ ಮಹೋತ್ಸವ: ಹುಬ್ಬಳ್ಳಿಯಲ್ಲಿ ಅದ್ಧೂರಿ ಆನೆ ಅಂಬಾರಿ ಮೆರವಣಿಗೆ