ಕಲಬುರಗಿ: ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲು ಬರಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳ ಗುಂಪೊಂದು ಯುವಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ನಡೆಸಿದ ಆಘಾತಕಾರಿ ಘಟನೆ ಜಿಲ್ಲೆಯ ವಿದ್ಯಾರ್ಥಿ ನಿಲಯವೊಂದರಲ್ಲಿ ನಡೆದಿದೆ. ಆರೋಪಿಗಳ ವಿರುದ್ಧ ಸಂತ್ರಸ್ತ ಯುವಕನ ತಂದೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 341, 323, 504, 505(2) ಮತ್ತು 506 ಅಡಿ ಆರೋಪಿಗಳ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೂಜೆಗೆ ಬಾರದ ಯುವಕನೊಂದಿಗೆ ಜಗಳ ತೆಗೆದ ಗುಂಪು, ಆತನನ್ನು ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ ಅಂಬೇಡ್ಕರ್ ಪೋಟೋ ಕೊಟ್ಟು ಮೆರವಣಿಗೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಾಸ್ಟೆಲ್‌ನಲ್ಲಿ ಪ್ರತಿ ಭಾನುವಾರ ಅಂಬೇಡ್ಕರ್ ಅವರ ಚಿತ್ರಕ್ಕೆ ಪೂಜೆ ಸಲ್ಲಿಸುವ ಸಂಪ್ರದಾಯವಿದೆ. ಕಾರಣಾಂತರಗಳಿಂದ ಯುವಕನಿಗೆ ಪೂಜೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ. ಈ ವಿಚಾರ ತಿಳಿದ ಹಾಸ್ಟೆಲ್ನ ಗುಂಪು, ಆತನ ಮೇಲೆ ಹಲ್ಲೆ ನಡೆಸಿದೆ ಎಂದು ಸಂತ್ರಸ್ತನ ತಂದೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಸಂಬಂಧ ಅವರು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನಲ್ಲಿ ವಿವರಿಸಿದ್ದಾರೆ. ಘಟನೆಯ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಯುವಕನ ಸಂಬಂಧಿ ಅರೆಬೆತ್ತಲೆಗೊಳಿಸಿ ಥಳಿತ ಆರೋಪ: ಓಡಿ ಹೋಗಿದ್ದ ಜೋಡಿ ಎಸ್ಪಿಗೆ ಮೊರೆ