ಚಿಕ್ಕಮಗಳೂರು: ನಗರದ ಸರ್ಕಾರಿ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಸಹೋದರಿಗೆ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಳೆ ತಜ್ಞರಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಆಸ್ಪತ್ರೆ ಮುಂಭಾಗ ಸಿಬ್ಬಂದಿ ಒಪಿಡಿ ಬಂದ್ ಮಾಡಿ, ತಮಗೆ ಸೂಕ್ತ ರಕ್ಷಣೆ ನೀಡುವಂತೆ ಮಂಗಳವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತ ವೈದ್ಯಕೀಯ ಸಿಬ್ಬಂದಿ ಹಲ್ಲೆಗೈದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಮೂಳೆ ತಜ್ಞರ ಶರ್ಟ್ ಮತ್ತು ಕುತ್ತಿಗೆಪಟ್ಟಿ ಹಿಡಿದು ಎಳೆದಾಡಿ ಮಹಿಳೆ ರಂಪ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ಸಂಪೂರ್ಣ ವಿವರ: ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಯುವಕನೊಬ್ಬ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆಯ ಸಮಯದಲ್ಲಿ ರೋಗಿಯ ಸಹೋದರಿ ನೀರಿನ ಬಾಟಲಿ ನೀಡಲು ಬಂದಿದ್ದರು. ಈ ವೇಳೆ ವೈದ್ಯರು ರೋಗಿಯ ಸಹೋದರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರಂತೆ. ಇದರಿಂದ ಸಿಟ್ಟಾದ ರೋಗಿಯ ಸಹೋದರಿ ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಎಸ್ಪಿಗೆ ದೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲಾಸ್ಪತ್ರೆ ಸರ್ಜನ್ ಮೋಹನ್ ಅವರು ಎಸ್ಪಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಸಮರ್ಪಕ ಪೊಲೀಸ್ ಸಿಬ್ಬಂದಿ ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಹೀಗಾಗಿ, ಜಿಲ್ಲಾಸ್ಪತ್ರೆಗೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನೇಮಿಸುವಂತೆ ಮನವಿ ಮಾಡಿದ್ದಾರೆ.
ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ನಗರ ಠಾಣೆ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಆರೋಗ್ಯ ಸಿಬ್ಬಂದಿಗೆ ಜಿಲ್ಲಾಸ್ಪತ್ರೆ ಸರ್ಜನ್, ಡಿಸ್ಟ್ರಿಕ್ಟ್ ಸರ್ಜನ್ ಸಾಥ್ ನೀಡಿದರು. 100ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿ ಭಾಗಿಯಾಗಿದ್ದರು.
ಇದನ್ನೂ ಓದಿ: ಮೂಡಿಗೆರೆ ಶಾಲೆ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಕಾಳಿಂಗ ಸರ್ಪ ಸೆರೆ: ವಿಡಿಯೋ - King Cobra Captured