ಬೆಂಗಳೂರು : ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಾಗಲಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ದಾಸರಹಳ್ಳಿ ನಿವಾಸಿಯಾಗಿದ್ದ ಶ್ರಾವಣಿ (22) ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಗಲಕುಂಟೆ ವ್ಯಾಪ್ತಿಯ 8ನೇ ಮೈಲಿಯಲ್ಲಿರುವ ಗೋಲ್ಡನ್ ಜಿಮ್ನಲ್ಲಿ ರಿಸೆಪ್ಶನಿಸ್ಟ್ ಆಗಿದ್ದ ಶ್ರಾವಣಿ, ಸೋಮವಾರ ಬೆಳಗ್ಗೆ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸ್ವಲ್ಪ ಸಮಯದ ಬಳಿಕ ಅಸ್ವಸ್ಥಳಾಗಿದ್ದ ಶ್ರಾವಣಿ ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಳ್ಳಲಾರಂಭಿಸಿದ್ದಳು. ತಕ್ಷಣ ಜಿಮ್ನವರು ಶ್ರಾವಣಿಯನ್ನ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶ್ರಾವಣಿಯ ಮದುವೆಗಾಗಿ ಪೋಷಕರು ಸಿದ್ಧತೆ ನಡೆಸಿದ್ದರು. ಆದರೆ ಮದುವೆ ಇಷ್ಟವಿರದಿದ್ದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಪೊಲೀಸರ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ. ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಓದಿ: ಬಾಯಿ ಕ್ಯಾನ್ಸರ್ನಿಂದ ಬಳಲುತ್ತಿದ್ದ ಸಿಪಿಐ ಬಾಪುಗೌಡ ಆತ್ಮಹತ್ಯೆಗೆ ಶರಣು