ಮಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಸಂಬಂಧ ಯುವಕನ ಮೇಲಿನ ಆರೋಪ ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಂಗಳೂರಿನ ಎರಡನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ನೀಡಿದೆ.
ಆರೋಪಿ ಯುವಕ ಬಾಲಕಿಯನ್ನು ಪ್ರೀತಿಸುತ್ತಿದ್ದ. 2023ರ ಜೂನ್ 13ರಂದು ಬೆಳಗ್ಗೆ ಆಕೆಯನ್ನು ಬಜ್ಪೆ ಬಸ್ ನಿಲ್ದಾಣದ ಬಳಿ ಕರೆಸಿಕೊಂಡಿದ್ದ. ಅಲ್ಲಿ ಬಾಲಕಿಯನ್ನು ಪುಸಲಾಯಿಸಿ, ಮಂಗಳೂರಿನ ಹೊರವಲಯದ ಗ್ರಾಮವೊಂದರ ಮನೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆಕೆಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ 3 ದಿನಗಳ ಕಾಲ ಜೊತೆಯಲ್ಲಿರಿಸಿಕೊಂಡು ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಆರೋಪಿಸಲಾಗಿತ್ತು. ಆರೋಪಿ ವಿರುದ್ಧ ಬಾಲಕಿ ನೀಡಿರುವ ದೂರಿನ ಅನ್ವಯ ಬಜ್ಪೆ ಪೊಲೀಸರು ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು.
ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಜಿಲ್ಲಾ ಎರಡನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಸಾಕ್ಷಿದಾರರನ್ನು ವಿಚಾರಣೆ ಮಾಡಿತು. ವಾದ - ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಮನು ಕೆ. ಅವರು, ಆರೋಪಿ ವಿರುದ್ಧ ಕೇಸ್ನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತಿಳಿಸಿ, ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿ ಬಿಡುಗಡೆ ಮಾಡಿ ಆದೇಶಿಸಿದ್ದಾರೆ.
ಆರೋಪಿ ಪರವಾಗಿ ಮುಖ್ಯ ಕಾನೂನು ನೆರವು ಅಭಿರಕ್ಷಕ ಜಿ.ವಾಸುದೇವ ಗೌಡ ವಾದ ಮಂಡಿಸಿದ್ದರು.
ಇದನ್ನೂ ಓದಿ: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ನಿಧಿ ಬೇರೆ ಕಾರ್ಯಗಳಿಗೆ ಬಳಕೆ: ಹೈಕೋರ್ಟ್ ತೀವ್ರ ತರಾಟೆ - High Court