ಹುಬ್ಬಳ್ಳಿ(ಧಾರವಾಡ): ಗುಡ್ ಫ್ರೈಡೆ ರಜೆ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(NWRTC) ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 120 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಮಾ.29ರಂದು ಗುಡ್ ಫ್ರೈಡೆ ರಜೆ. ಮಾ.30 ಮತ್ತು 31ರಂದು ಕ್ರಮವಾಗಿ ಶನಿವಾರ ಮತ್ತು ಭಾನುವಾರದ ವಾರಾಂತ್ಯ ರಜೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತಿತರೆ ಪ್ರಮುಖ ಸ್ಥಳಗಳಿಂದ ಹೆಚ್ಚಿನ ಪ್ರಯಾಣಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ನೆರವಾಗುವಂತೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಬಿಡಲಾಗುತ್ತಿದೆ.
ಬೆಂಗಳೂರಿನಿಂದ ರಾಜ್ಯ/ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ತೆರಳಲು 28.03.2024ರಿಂದ 30.03.2024ರವರೆಗೆ ಹೆಚ್ಚುವರಿ ವಿಶೇಷ ಸಾರಿಗೆ ಸೌಲಭ್ಯವಿದೆ. ರಜೆ ಮುಗಿದ ಬಳಿಕ ದಿನಾಂಕ 31.03.2024ರಂದು ಮತ್ತು ನಂತರದ ದಿನಗಳಂದು ಪ್ರಮುಖ ಸ್ಥಳಗಳಿಂದ ಜನದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗುವುದು. ಸುಖಕರ ಹಾಗೂ ಸುರಕ್ಷಿತ ಪ್ರಯಾಣಕ್ಕಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸುವಂತೆ ಮತ್ತು ವಿಶೇಷ ಹೆಚ್ಚುವರಿ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ನನ್ನ ಗೆಲುವನ್ನ ಜನ ತೀರ್ಮಾನ ಮಾಡುತ್ತಾರೆ: ಹೆಚ್ ಡಿ ಕುಮಾರಸ್ವಾಮಿ - H D Kumaraswamy