ಬೆಂಗಳೂರು: ಕೇಂದ್ರದ ಮೋಟಾರ್ ಕಾಯ್ದೆ ಅನ್ವಯ ಎಲ್ಲ ವಾಹನಗಳಿಗೆ ಕಡ್ಡಾಯವಾಗಿ ಹೆಡ್ ಲೈಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ದೀಪಗಳನ್ನು ವಾಹನಗಳಿಗೆ ಅಳವಡಿಸುತ್ತಿದ್ದು, ಅದರಿಂದ ಎದುರುಗಡೆಯಿಂದ ಸಂಚರಿಸುವ ಇತರ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್, ಬಸ್ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸುತ್ತಿರುವುದರಿಂದ ಇತರ ವಾಹನಗಳ ಸವಾರರಿಗೆ ಸಮಸ್ಯೆ ಆಗುತ್ತಿದೆ. ಅಲ್ಲದೆ, ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದಿದ್ದಾರೆ.
ಆದರಿಂದ ಎಲ್ಲ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ನಮೂದಿಸಿರುವ ಮಾನದಂಡದಂತೆ ನಿಗದಿತ ಹೆಡ್ ಲೈಟ್ಗಳನ್ನೇ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದರೆ, ಅಂತಹ ವಾಹನ ಸವಾರರ ವಿರುದ್ಧ ಕೇಸ್ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಜೊತೆಗೆ, ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಬೇಕು. ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಸಿರುವುದು ಕಂಡುಬಂದರೆ ಜುಲೈನಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಆದೇಶದಲ್ಲಿ ಸೂಚಿಸಿದ್ದಾರೆ.
ಇದನ್ನೂ ಓದಿ: ಮಲೆನಾಡಿನಲ್ಲಿ ಧಾರಾಕಾರ ಮಳೆ : ಸೇತುವೆ ಮೇಲೆ ಹರಿದ ನೀರು, ರಸ್ತೆ ಸಂಪರ್ಕ ಬಂದ್ - heavy rainfall in chikkamagaluru