ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತರ ರೂಪಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾ ಅಹಿಂದ ವರ್ಗಗಳ ವತಿಯಿಂದ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಅಹಿಂದ ವರ್ಗದ ನಾಯಕ ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಲು ರಾಜ್ಯಪಾಲರನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಬಿಜೆಪಿ-ಜೆಡಿಎಸ್ ಪಕ್ಷದವರು ಯಾವುದೇ ಕಾರಣವಿಲ್ಲದೆ ಬೆಂಗಳೂರು-ಮೈಸೂರು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮೂಲಕ ಕಳಂಕರಹಿತವಾಗಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವ ಹುನ್ನಾರ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಿವಪ್ಪ ನಾಯಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯ ಸಂಚಾಲಕ ರಂಗನಾಥ್ ಮಾತನಾಡಿ, ತಮ್ಮ ರಾಜಕೀಯ ಜೀವನದಲ್ಲಿ ಯಾವುದೇ ಭ್ರಷ್ಟಾಚಾರ ನಡೆಸದೇ ಹಲವು ಬಾರಿ ಬಜೆಟ್ ಮಂಡಿಸಿ ಜನಮನ ಗೆದ್ದಿರುವ ಸಿಎಂ ಸಿದ್ದರಾಮಯ್ಯನವರಿಗೆ ಕಳಂಕ ತರುವ ಕೆಲಸವನ್ನು ಮೈತ್ರಿ ಪಕ್ಷಗಳು ಮಾಡುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಯಡಿಯೂರಪ್ಪ ಹಾಗೂ ಅವರ ಮಕ್ಕಳು ಸಾವಿರಾರು ಎಕರೆ ಬೇನಾಮಿ ಹೆಸರಿನಲ್ಲಿ ಭೂಮಿ ಖರೀದಿಸಿದ್ದಾರೆ. ಇಂತಹ ವಿಚಾರಗಳ ಬಗ್ಗೆ ಮಾತನಾಡದೇ, ಉತ್ತಮ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯನವರನ್ನು ಕೆಣಕುವ ವಿಚಾರ ಮಾಡಿದರೆ ರಾಜ್ಯಾದ್ಯಂತ ಅಹಿಂದ ವರ್ಗಗಳು ಹೋರಾಟ ನಡೆಸುತ್ತವೆ ಎಂದು ಎಚ್ಚರಿಕೆ ನೀಡಿದರು.
ವಿವಿಧ ಅಹಿಂದ ವರ್ಗಗಳು, ಅಲ್ಪಸಂಖ್ಯಾತರು, ಅಲೆಮಾರಿ ಸಮುದಾಯದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಹಾವೇರಿ, ಕೋಲಾರದಲ್ಲೂ ಪ್ರತಿಭಟನೆ: ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯಪಾಲರು ನೋಟಿಸ್ ನೀಡಿರುವ ಕ್ರಮ ಖಂಡಿಸಿ ಹಾವೇರಿ ನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಪ್ರಮುಖ ಬೀದಿಗಳಲ್ಲಿ ಸಾಗಿ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ನಂತರ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಶಾಸಕ ಯು.ಬಿ.ಬಣಕಾರ್, ಪ್ರಕಾಶ್ ಕೋಳಿವಾಡ, ಬಸವರಾಜ್ ಶಿವಣ್ಣನವರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ್ ಕುಮಾರ್ ನೀರಲಗಿ, ಸೇರಿದಂತೆ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ - ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಖಂಡಿಸಿ ಕೋಲಾರ ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಕೆ.ವಿ. ಗೌತಮ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್, ಎಸ್ಸಿ ಘಟಕದ ಅಧ್ಯಕ್ಷ ಜೈದೇವ್ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.
ಇದನ್ನೂ ಓದಿ: 'ಸರ್ಕಾರ ಕೆಡವುವ ದುಸ್ಸಾಹಸಕ್ಕೆ ಬಿಜೆಪಿ ಕೈಹಾಕಲ್ಲ, ತಾನಾಗಿಯೇ ಬಿದ್ದರೆ ನಾವು ಸನ್ಯಾಸಿಗಳಲ್ಲ' - Mahesh Tenginakai