ಬೆಂಗಳೂರು: ಮಡಿಕೇರಿ ನಗರಸಭೆ, ಶ್ರೀರಂಗಪಟ್ಟಣ ಪುರಸಭೆ ಸೇರಿದಂತೆ ಕೆಲ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಿಗದಿಪಡಿಸಿರುವ ಮೀಸಲಾತಿಯನ್ನು ಪ್ರಶ್ನಿಸಿ ಆಕ್ಷೇಪಿಸಿ ಸಲ್ಲಿಸಿರುವ ಅರ್ಜಿಗಳ ಸಂಬಂಧ ರಾಜ್ಯ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಡಿಕೇರಿ ನಗರಸಭೆಯ 10ನೇ ಅವಧಿಗೆ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವುದನ್ನು ರದ್ದುಪಡಿಸಿ ಹೊಸದಾಗಿ ಮೀಸಲು ನಿಗದಿಪಡಿಸಬೇಕು ಎಂದು ಕೋರಿ ಹೆಚ್.ಎಂ. ನಂದಕುಮಾರ್ ಹಾಗೂ ಶ್ರೀರಂಗಪಟ್ಟಣ ಪುರಸಭೆಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಪಡಿಸಿರುವುದನ್ನು ರದ್ದುಪಡಿಸಬೇಕು ಎಂದು ಕೋರಿ ಶಿವು ಎಂಬುವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ, ಮಡಿಕೇರಿ ನಗರಸಭೆ ಹಾಗೂ ಶ್ರೀರಂಗಪಟ್ಟಣ ಪುರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಗೆ ಸೀಮಿತವಾಗಿ ಮಧ್ಯಂತರ ತಡೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಿತು.
ಮೈಸೂರು ಜಿಲ್ಲಾಧಿಕಾರಿಗೆ ನೋಟಿಸ್: ಅದೇ ರೀತಿ ಮೈಸೂರು ಜಿಲ್ಲೆ ಸರಗೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ-ಎ (ಮಹಿಳೆ) ಹಾಗೂ ಉಪಾಧ್ಯಕ್ಷ ಸ್ಥಾನವನ್ನು ಸಾಮಾನ್ಯ ವರ್ಗಕ್ಕೆ ನಿಗದಿಪಡಿಸಿರುವುದನ್ನು ರದ್ದುಪಡಿಸಿ ಎಸ್ಟಿ ವರ್ಗಕ್ಕೆ ಮೀಸಲು ನಿಗದಿಪಡಿಸಬೇಕು ಎಂದು ಕೋರಿ ಆರ್. ದಿವ್ಯಾ ಎಂಬುವರು ಸಲ್ಲಿಸಿದ ಅರ್ಜಿ ಸಂಬಂಧ ನಗರಾಭಿವೃದ್ಧಿ ಇಲಾಖೆ, ಮೈಸೂರು ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಚುನಾವಣಾ ಆಯೋಗಕ್ಕೆ ನೋಟಿಸ್: ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪುರಸಭೆ ಅಧ್ಯಕ್ಷ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿಟ್ಟಿರುವುದನ್ನು ರದ್ದುಪಡಿಸಬೇಕು ಎಂದು ಕೋರಿ ಕೆ.ಸಿ. ಮಂಜುನಾಥ ಎಂಬುವರು ಸಲ್ಲಿಸಿರುವ ಅರ್ಜಿ ಸಂಬಂಧ ನಗರಾಭಿವೃದ್ದಿ ಇಲಾಖೆ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿತು. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಸೆ.2ರಂದು ಚುನಾವಣೆ ನಿಗದಿಯಾಗಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರಿಂದ ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ಆಗಸ್ಟ್ 31ಕ್ಕೆ ನಿಗದಿಪಡಿಸಿ ಆದೇಶಿಸಿತು.
ರಾಜ್ಯದ ಎಲ್ಲಾ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ 10ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ರಾಜ್ಯ ಸರ್ಕಾರ ಆಗಸ್ಟ್ 5ರಂದು ಅಧಿಸೂಚನೆ ಹೊರಡಿಸಿತ್ತು. ಮಡಿಕೇರಿ, ಶ್ರೀರಂಗಪಟ್ಟಣ, ಸರಗೂರು, ಕೃಷ್ಣರಾಜಪೇಟೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿಯನ್ನು ಆಕ್ಷೇಪಿಸಿ ಅರ್ಜಿಗಳನ್ನು ಸಲ್ಲಿಸಲಾಗಿದೆ.
ಇದನ್ನೂ ಓದಿ: ಡಿಕೆಶಿ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದಿದ್ದ ಪ್ರಕರಣ: ಗುರುವಾರ ಅಂತಿಮ ತೀರ್ಪು - high court