ಬೆಳಗಾವಿ: ''ಭೀಮಗಡ ಅಭಯಾರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳಿಗೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಪುನರ್ವಸತಿ ಕಲ್ಪಿಸಲಾಗುವುದು'' ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭರವಸೆ ನೀಡಿದರು.
ಭೀಮಗಡ ಅಭಯಾರಣ್ಯದಲ್ಲಿ ವಾಸಿಸುತ್ತಿರುವ ಖಾನಾಪುರ ತಾಲೂಕಿನ ತಳೇವಾಡಿ ಗ್ರಾಮಸ್ಥರನ್ನು ಸ್ಥಳಾಂತರಿಸುವ ಸಂಬಂಧ ಭೀಮಗಡ ನೇಚರ್ ಕ್ಯಾಂಪ್ ಆವರಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಅಧಿಕಾರಿಗಳು ಮತ್ತು ಗ್ರಾಮಸ್ಥರ ಸಭೆಯಲ್ಲಿ ಅವರು ಮಾತನಾಡಿದರು. ಅಭಯಾರಣ್ಯದಲ್ಲಿ ವಾಸಿಸುವ ಜನರಿಗೆ ರಸ್ತೆ, ನೀರು, ವಿದ್ಯುತ್ ಮತ್ತಿತರ ಮೂಲಸೌಕರ್ಯಗಳನ್ನು ಕಲ್ಪಿಸುವುದು ಸಾಧ್ಯವಾಗುತ್ತಿಲ್ಲ. ಆದ್ದರಿಂದ ತಳೇವಾಡಿ ಗ್ರಾಮದ ಜನರು ಸ್ವಇಚ್ಛೆಯಿಂದ ಸ್ಥಳಾಂತರಕ್ಕೆ ಒಪ್ಪಿಗೆ ನೀಡಿದರೆ ತಕ್ಷಣವೇ ಎಲ್ಲ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು, ''ಎಲ್ಲ ಕುಟುಂಬಗಳಿಗೆ ಪರ್ಯಾಯ ಜಾಗ ಮತ್ತು ಮನೆಯನ್ನು ಒದಗಿಸಬೇಕು'' ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ''ಸರ್ಕಾರದ ಮಾರ್ಗಸೂಚಿ ಪ್ರಕಾರ ವ್ಯವಸ್ಥೆ ಮಾಡಲಾಗುವುದು'' ಎಂದು ಭರವಸೆ ನೀಡಿದರು.
ಗ್ರಾಮಸ್ಥರ ಬಳಿ ಇರುವ ದಾಖಲೆಗಳನ್ನು ಪರಿಶೀಲಿಸಬೇಕು ಹಾಗೂ ಪುನರ್ವಸತಿಗಾಗಿ ಸರ್ಕಾರದಿಂದ ಬಿಡುಗಡೆಯಾಗುವ ಅನುದಾನದ ಬಳಕೆಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಮತ್ತು ಪುನರ್ವಸತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳ ಹೆಸರಿನಲ್ಲಿ ಜಂಟಿ ಖಾತೆ ತೆರೆಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಡಿಸಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಎಫ್ ಮರಿಯಾ ಕ್ರಿಸ್ತುರಾಜಾ, ಎಸಿಎಫ್ ಸುನೀತಾ ನಿಂಬರಗಿ, ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸೇರಿದಂತೆ ಅರಣ್ಯ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ತಳೇವಾಡಿ ಗ್ರಾಮದ ಜನರು ಪಾಲ್ಗೊಂಡಿದ್ದರು.