ಮೈಸೂರು: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಅಶೋಕಪುರಂನ ಎನ್ಟಿಎಂ ಶಾಲೆಯ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕಿಡಲಾಗಿದೆ. ಸೋಮವಾರ ಮಧ್ಯಾಹ್ನ 3 ಗಂಟೆಯಿಂದ ಮಂಗಳವಾರ ಬೆಳಗ್ಗೆ 10 ಗಂಟೆಯವರೆಗೆ ಸಾರ್ವಜನಿಕರು ಅಂತಿಮ ದರ್ಶನ ಪಡೆಯಬಹುದು. ಮಂಗಳವಾರ ಬೆಳಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ಅಶೋಕಪುರಂನ ಬೀದಿಗಳಲ್ಲಿ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಡಾ.ಅಂಬೇಡ್ಕರ್ ಟ್ರಸ್ಟ್ ಆವರಣಕ್ಕೆ ಕೊಂಡೊಯ್ಯಲಾಗುತ್ತದೆ. ಮಧ್ಯಾಹ್ನ ಬೌದ್ಧಧರ್ಮದ ವಿಧಿವಿಧಾನದಂತೆ ಅಂತ್ಯಕ್ರಿಯೆ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
"ನನ್ನನ್ನು ರಾಜಕೀಯವಾಗಿ ಬೆಳೆಸಿದ ನಾಯಕ ಶ್ರೀನಿವಾಸ್ ಪ್ರಸಾದ್. ಅವರು ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನನ್ನ ಗೆಲುವಿಗೆ ಕಾರಣರಾಗಿದ್ದರು. ಅವರು ಕಾಂಗ್ರೆಸ್ ತೊರೆದಾಗ ನಾನು ಕಣ್ಣೀರು ಹಾಕಿದ್ದೆ. ಮಣಿಪಾಲ್ ಆಸ್ಪತ್ರೆಯಲ್ಲಿದ್ದಾರೆ ಎಂದು ತಿಳಿದು ನೋಡಲು ಹೋಗಬೇಕಿತ್ತು. ಅಷ್ಟರಲ್ಲೇ ಇಂದು ಬೆಳಗ್ಗೆ ನಿಧನದ ಸುದ್ದಿ ತಿಳಿದು ದುಃಖವಾಯಿತು" ಎಂದು ಶಾಸಕ ಪುಟ್ಟರಂಗ ಶೆಟ್ಟಿ ಕಂಬನಿ ಮಿಡಿದಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡ, ಸುತ್ತೂರು ಶ್ರೀ ಹಾಗೂ ಎಂಎಲ್ಸಿ ಹೆಚ್.ವಿಶ್ವನಾಥ್ ಅವರು ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ: ಶ್ರೀನಿವಾಸ ಪ್ರಸಾದ್ ನಿಧನ ಹಿನ್ನೆಲೆಯಲ್ಲಿ ಗೌರವಾರ್ಥವಾಗಿ ಮಂಗಳವಾರ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪೂರ್ವ ನಿಗದಿಯಾಗಿರುವ ಪರೀಕ್ಷೆಗಳನ್ನು ಹೊರತುಪಡಿಸಿ ಸರ್ಕಾರಿ, ಅನುದಾನ ಪಡೆಯುವ ಎಲ್ಲಾ ವಿದ್ಯಾ ಸಂಸ್ಥೆಗಳಿಗೂ ದಿನಾಂಕ 30.04.2024 ರಂದು ರಜೆ ನೀಡಲಾಗಿದೆ. ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಗುವುದು ಎಂದು ಕರ್ನಾಟಕ ಸರ್ಕಾರದ ಅಧೀನ ಕಾರ್ಯದರ್ಶಿ ವಿಜಯ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಬೌದ್ಧ ಧರ್ಮದ ಸಂಪ್ರದಾಯದಂತೆ ನಾಳೆ ಶ್ರೀನಿವಾಸ ಪ್ರಸಾದ್ ಅಂತ್ಯಕ್ರಿಯೆ - Srinivasa Prasad funeral
5 ದಶಕಗಳ ಸುದೀರ್ಘ ಸಕ್ರಿಯ ರಾಜಕಾರಣದಲ್ಲಿದ್ದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ (76) ವಯೋಸಹಜ ಖಾಯಿಲೆಗಳಿಂದ ಬಳಲಿ ಭಾನುವಾರ ತಡರಾತ್ರಿ 1.30 ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಇವರು ಮಾರ್ಚ್ನಲ್ಲಿ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು. 14 ಬಾರಿ ಚುನಾವಣೆಗೆ ಸ್ಪರ್ಧಿಸಿ, 6 ಬಾರಿ ಸಂಸದರಾಗಿ ಮತ್ತು ಎರಡು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು.
ಇದನ್ನೂ ಓದಿ: 14 ಚುನಾವಣೆ, 7 ಪ್ರಧಾನಿಗಳನ್ನು ಕಂಡಿದ್ದ ಪ್ರಸಾದ್: ಸೋಲಿನಿಂದ ಆರಂಭ, ಗೆಲುವಿನಿಂದ ರಾಜಕೀಯ ಅಂತ್ಯ - Srinivasa Prasad