ಬೆಂಗಳೂರು: ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಹತ್ತು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಸೆಕ್ಯುರಿಟಿ ಗಾರ್ಡ್ ಓರ್ವನನ್ನು ಹೆಬ್ಬಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ರಾಜೇಶ್ ಗುಪ್ತಾ (55) ಎಂಬಾತನನ್ನು ಬಂಧಿಸಲಾಗಿದೆ.
ಕೆಲ ವರ್ಷಗಳ ಹಿಂದೆ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಆರೋಪಿ, ನಗರದ ಅಪಾರ್ಟ್‌ಮೆಂಟ್ ಸಮುಚ್ಚಯವೊಂದರಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದ. ಸಂತ್ರಸ್ತ ಬಾಲಕಿಯ ಪೋಷಕರು ನೇಪಾಳ ಮೂಲದವರಾಗಿದ್ದು, ಆರೋಪಿ ಕೆಲಸ ಮಾಡುತ್ತಿದ್ದ ಸ್ಥಳದ ಪಕ್ಕದಲ್ಲೇ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು.
ಬಾಲಕಿಯನ್ನು ಪರಿಚಯಿಸಿಕೊಂಡಿದ್ದ ಆರೋಪಿ, ಶನಿವಾರ ರಾತ್ರಿ ಚಾಕೊಲೇಟ್ ಕೊಡಿಸುವುದಾಗಿ ಆಮಿಷವೊಡ್ಡಿ ಆಕೆಯನ್ನು ಶೌಚಾಲಯದೊಳಗೆ ಕರೆದೊಯ್ದು ದೌರ್ಜನ್ಯ ಎಸಗಿದ್ದ. ಆರೋಪಿಯ ಕೃತ್ಯವನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದಳು. ತಕ್ಷಣ ಆಕೆಯ ಪೋಷಕರು ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿ ರಾಜೇಶ್ ಗುಪ್ತಾನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರಕಾಸ್ತ್ರಗಳ ಸಹಿತ ಬಾರ್ ಆ್ಯಂಡ್ ರೆಸ್ಟೊರೆಂಟ್‌ನಲ್ಲಿ ಕುಳಿತಿದ್ದ ಇಬ್ಬರ ಬಂಧನ - BENGALURU CRIME