ಬಾಗಲಕೋಟೆ: ಬಿಜೆಪಿಯಿಂದ ಬಂಡೆದ್ದು ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಲ್ಲಿಕಾರ್ಜುನ ಚರಂತಿಮಠ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ನವನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಚಿವ ಶಿವಾನಂದ ಪಾಟೀಲ ಹಾಗೂ ಎಚ್.ಕೆ.ಪಾಟೀಲ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಚರಂತಿಮಠ ಹಾಗೂ ಸಂತೋಷ ಹೊಕ್ರಾಣಿ ಅವರಿಗೆ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ವೇಳೆ ಸಚಿವ ಆರ್.ಬಿ.ತಿಮ್ಮಾಪೂರ ಹಾಗೂ ಎಸ್.ಆರ್.ಪಾಟೀಲ ಇದ್ದರು.
ನಂತರ ಸಚಿವ ಎಚ್.ಕೆ.ಪಾಟೀಲ ಮಾತನಾಡಿ, ಕಾಂಗ್ರೆಸ್ ಪಕ್ಷದ ನುಡಿದಂತೆ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಈ ಸಲ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ಉತ್ತರ ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆ ಪ್ರಕರಣವನ್ನು ಖಂಡಿಸಿದ ಅವರು, ತಪ್ಪು ಮಾಡಿದ ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.