ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (KMVSTDCL) ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಾಗೇಂದ್ರ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ಸತ್ರ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ವಿಚಾರಣೆ ಮುಂದೂಡಿದ್ದಾರೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಮೆರಿಟ್ ಮೇಲೆ ವಾದಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅದಕ್ಕೆ ನ್ಯಾಯಾಧೀಶರು, ಜಾಮೀನು ಅರ್ಜಿಯು 15 ದಿನಗಳಿಂದ ಬಾಕಿ ಉಳಿದಿದ್ದು, ಸುಪ್ರೀಂಕೋರ್ಟ್ ಜಾಮೀನು ಅರ್ಜಿಗಳನ್ನು ತುರ್ತಾಗಿ ವಿಲೇವಾರಿ ಮಾಡಬೇಕು ಎಂದು ಮಾರ್ಗಸೂಚಿ ರೂಪಿಸಿದೆ. ನ್ಯಾಯದಾನದ ದೃಷ್ಟಿಯಿಂದ ಕೊನೆಯ ಬಾರಿಗೆ ಅರ್ಜಿದಾರರಿಗೆ ವಾದಿಸಲು ಅವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ವಿಚಾರಣೆ ಮುಂದೂಡಿದರು.
ಪ್ರಕರಣದ ಹಿನ್ನೆಲೆ ಏನು?: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದದಿಂದ ಸುಮಾರು 189 ಕೋಟಿ ರೂ. ಅವ್ಯವಹಾರ ಆಗಿದೆ ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಸೇರಿ ಹಲವರ ಬಂಧನವಾಗಿತ್ತು. ಪ್ರಕರಣದ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲದ ಅಧಿಕಾರಿಗಳು ನಾಗೇಂದ್ರ ಸೇರಿ ಮತ್ತಿತರರ ವಿರುದ್ಧ ಚಾರ್ಚ್ಶೀಟ್ ಸಲ್ಲಿಸಿದ್ದರು. ಇದೀಗ ನಾಗೇಂದ್ರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ತಲೆದಂಡ: ಪ್ರತಾಪ್ ಸಿಂಹ - Pratap Simha