ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ನೆಲಮಂಗಲ ಪಟ್ಟಣಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಲಂಕಷವಾಗಿ ಪರಿಶೀಲಿಸಲು ತನಿಖಾ ತಂಡ ರಚನೆ ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಪಟ್ಟಣಗಳಲ್ಲಿ ಪಿಸಿ, ಪಿಎನ್‌ಡಿಟಿ ಮತ್ತು ಎಂಟಿಪಿ ಕಾಯ್ದೆ ಉಲ್ಲಂಘನೆ, ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆ, ಕಾನೂನು ಬಾಹಿರ ಗರ್ಭಪಾತ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮತ್ತು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ನಡುವೆ ಭಿನ್ನಾಭಿಪ್ರಾಯಗಳು ಉಂಟಾಗಿ, ಅಹವಾಲುಗಳನ್ನು ಸಲ್ಲಿಸಿಕೊಂಡಿರುವುದರಿಂದ ಈ ಕುರಿತು ಕೂಲಂಕಷವಾಗಿ ಪರಿಶೀಲಿಸಿ, ತನಿಖೆ ನಡೆಸುವಂತೆ ಆದೇಶಿಸಲಾಗಿದೆ.
ತನಿಖಾ ತಂಡದಲ್ಲಿ ಯೋಜನಾ ನಿರ್ದೇಶಕರೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕರು(ವೈದ್ಯಕೀಯ/ಪಿಸಿ ಪಿಎನ್‌ಡಿಟಿ) ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಉಪ ನಿರ್ದೇಶಕರನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಈ ತಂಡವು ಆಸ್ಪತ್ರೆಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಗೆ ಭೇಟಿ ನೀಡಿ ಎಲ್ಲ ಅಂಶಗಳ ಕುರಿತು ವಾಸ್ತವಾಂಶದ ತನಿಖೆ ನಡೆಸಿ ಸೂಕ್ತ ದಾಖಲೆಗಳೊಂದಿಗೆ ವಿವರವಾದ ವರದಿಯನ್ನು ಮಾ.26ರಂದು ಆಯುಕ್ತಾಲಯಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.