ಬೆಂಗಳೂರು: ಬಾಂಗ್ಲಾದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ಪ್ರಕರಣದ ಆರೋಪಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ ಮುದುಕಪ್ಪ (28) ಎಂಬಾತನನ್ನು ಫೆ.2ರಂದು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಜನವರಿ 24ರಂದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರವೆಸಗಿ ಬಳಿಕ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ 28 ವರ್ಷದ ಮಹಿಳೆಯ ಶವ ಪತ್ತೆಯಾಗಿತ್ತು.
ಬೆಂಗಳೂರಲ್ಲಿ ವಾಟರ್ ಟ್ಯಾಂಕರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಮುದುಕಪ್ಪ, ಮಹಿಳೆ ವಾಸವಿದ್ದ ಶೆಡ್ ಹಾಗೂ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ ನೀರು ಪೂರೈಸಲು ಹೋದಾಗ ಆಕೆಯೊಂದಿಗೆ ಮಾತನಾಡುತ್ತಿದ್ದ. ಜನವರಿ 23ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ್ದ ಮುದುಕಪ್ಪ, ಬಳಿಕ ಆಕೆಯನ್ನ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ. ಆಕೆ ಪ್ರತಿರೋಧವೊಡ್ಡಿದಾಗ ಲೈಂಗಿಕ ದೌರ್ಜನ್ಯ ಎಸಗಿ, ನಂತರ ಉಸಿರುಗಟ್ಟಿಸಿ ಹತ್ಯೆಗೈದಿದ್ದ. ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮರಣೋತ್ತರ ವರದಿ ಆಧರಿಸಿ ಆರೋಪಿ ಬಂಧನ; ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿ ನಗರ ಠಾಣೆ ಪೊಲೀಸರು ಘಟನೆಯ ದಿನ ಕೆರೆಯ ಬಳಿ ಓಡಾಡಿದ್ದ ಐದಾರು ಜನರನ್ನು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಮೃತದೇಹದ ಮರಣೋತ್ತರ ಪರೀಕ್ಷಾ ವರದಿ ಹಾಗೂ ಎಫ್ಎಸ್ಎಲ್ ವರದಿಯನ್ನು ಆಧರಿಸಿ ಆರೋಪಿ ಮುದುಕಪ್ಪನನ್ನು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಅನಧಿಕೃತವಾಗಿ ನೆಲೆಸಿರುವ ವಿದೇಶಿಗರ ಪತ್ತೆ ಹಾಗೂ ಗಡಿಪಾರಿನ ಕುರಿತು ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಂಗ್ಲಾದೇಶ ಮೂಲದವರು ಮಾತ್ರವಲ್ಲದೆ, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಆಫ್ರಿಕಾ ಮೂಲದವರು ಸೇರಿದಂತೆ ಇತರರನ್ನು ಪತ್ತೆ ಹಚ್ಚಿ ಗಡಿಪಾರು ಮಾಡುವ ಕೆಲಸಗಳಾಗುತ್ತಿವೆ ಎಂದು ಆಯುಕ್ತರು ತಿಳಿಸಿದರು.
ಇದನ್ನೂ ಓದಿ: ಬೆಂಗಳೂರು: ಅತ್ಯಾಚಾರ ಮಾಡಿ ಮಹಿಳೆಯ ಹತ್ಯೆ, ನಿರ್ಜನ ಪ್ರದೇಶದಲ್ಲಿ ಶವ ಪತ್ತೆ
ಇದನ್ನೂ ಓದಿ: 16 ವರ್ಷದ ಅಪ್ರಾಪ್ತೆಯ 27 ವಾರಗಳ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ
ಇದನ್ನೂ ಓದಿ: ಬಾಲಕಿ ಅಪಹರಿಸಿ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳಿಗೆ 20 ವರ್ಷ ಕಠಿಣ ಶಿಕ್ಷೆ