ಬೆಂಗಳೂರು: "ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರಿಗಾಗಿ ಜಾರಿಗೊಳಿಸಿರುವ ಒಂದು ಬಾರಿ ಪರಿಹಾರ ಯೋಜನೆ(ಒಟಿಎಸ್)ಯು ಇದೇ ಜುಲೈ 31ಕ್ಕೆ ಮುಗಿಯಲಿದೆ. ನಾಗರೀಕರು ಕೂಡಲೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು" ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯ ಮುಖ್ಯ ಆಯುಕ್ತರ ಕಛೇರಿಯಲ್ಲಿ ಸೋಮವಾರ ಪರಿಶೀಲನಾ ಸಭೆ ನಡೆಯಿತು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನಗರದಲ್ಲಿ ಒಂದು ಬಾರಿ ಪರಿಹಾರ ಯೋಜನೆಯಡಿ ಸುಮಾರು 4 ಲಕ್ಷ ಸುಸ್ತಿದಾರರಿದ್ದಾರೆ. ಈ ಪೈಕಿ ಇದುವರೆಗೆ 80 ಸಾವಿರ ಸುಸ್ತಿದಾರರು ಇದರ ಸದುಪಯೋಗ ಪಡೆದುಕೊಂಡು ಬಾಕಿ ಆಸ್ತಿ ತೆರಿಗೆ ಪಾವತಿಸಿದ್ದಾರೆ. ಉಳಿದ 3.20 ಲಕ್ಷ ಸುಸ್ತಿದಾರರಿಗೆ ಜುಲೈ 31ರವರೆಗೆ ಮಾತ್ರ ಅವಕಾಶವಿದೆ. ಕೂಡಲೆ ಇದರ ಸದುಪಯೋಗಪಡಿಸಿಕೊಳ್ಳಿ" ಎಂದು ತಿಳಿಸಿದರು.
"ಒಂದು ಬಾರಿ ಪರಿಹಾರ ಯೋಜನೆಯಡಿ ಬಾಕಿ ಆಸ್ತಿ ತೆರಿಗೆ ಪಾವತಿಸುವವರು ಎಷ್ಟು ಪಾವತಿಸಬೇಕು, ಎಲ್ಲಿ ಪಾವತಿಸಬೇಕು ಎಂಬುದೂ ಸೇರಿದಂತೆ ಗೊಂದಲಗಳಿದ್ದರೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆ 1533ಗೆ ಕರೆ ಮಾಡಿ ಅಗತ್ಯ ಮಾಹಿತಿ ಪಡೆದುಕೊಳ್ಳಬಹುದು" ಎಂದು ಹೇಳಿದರು.
ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ: ನಗರದಲ್ಲಿ ಡೆಂಗ್ಯೂ ನಿಯಂತ್ರಣಕ್ಕಾಗಿ ಕಿರಿಯ ಆರೋಗ್ಯ ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಎಎನ್ಎಂಗಳು, ಲಿಂಕ್ ವರ್ಕರ್ಸ್ ಹಾಗೂ ಸ್ವಯಂ ಸೇವಕರನ್ನೊಳಗೊಂಡಂತೆ 3,000ಕ್ಕೂ ಹೆಚ್ಚು ತಂಡಗಳನ್ನು ನಿಯೋಜಿಸಲಾಗಿದೆ. ಎಲ್ಲಾ 25 ಲಕ್ಷ ಮನೆಗಳಿಗೂ ಭೇಟಿ ನೀಡಿ ಸಮೀಕ್ಷೆ ನಡೆಸುವ ಜೊತೆಗೆ ಡೆಂಗ್ಯೂ ನಿಯಂತ್ರಣ ಕುರಿತ ಬಿತ್ತಿಪತ್ರಗಳನ್ನು ವಿತರಿಸಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ" ಎಂದು ತಿಳಿಸಿದರು.
"ನಗರದಲ್ಲಿ 2024 ಜನವರಿಯಿಂದ ಇದುವರೆಗೆ 3,815 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಜುಲೈ 1ರಿಂದ 6ನೇ ತಾರೀಖಿನವರೆಗೆ 776 ಪ್ರಕರಣಗಳು ದೃಢಪಟ್ಟಿವೆ. ಪ್ರತಿನಿತ್ಯ ಸರಾಸರಿ 130ರಿಂದ 140 ಪ್ರಕರಣಗಳು ದಾಖಲಾಗುತ್ತಿವೆ. ಹೆಚ್ಚು ಪ್ರಕರಣಗಳು ಕಂಡುಬರುವ ಪ್ರದೇಶಗಳಲ್ಲಿ ಔಷಧಿ ಸಿಂಪಡಣೆ ಹಾಗೂ ಫಾಗಿಂಗ್ ಹೆಚ್ಚಾಗಿ ಮಾಡಲಾಗುತ್ತಿದೆ" ಎಂದು ಹೇಳಿದರು.
ಪಾಲಿಕೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಾಗರೀಕರು ತಮ್ಮ-ತಮ್ಮ ಮನೆಗಳಲ್ಲಿ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ತಪ್ಪದೆ ಅನುಸರಿಸಿದಲ್ಲಿ ಮಾತ್ರ ಡೆಂಗ್ಯೂ ನಿಯಂತ್ರಿಸಲು ಸಾಧ್ಯ. ಡೆಂಗ್ಯೂ ನಿಯಂತ್ರಣದಲ್ಲಿ ನಾಗರೀಕರ ಸಹಕಾರ ಪ್ರಮುಖ ಪಾತ್ರ ವಹಿಸಲಿದೆ" ಎಂದು ತಿಳಿಸಿದರು.
"ಮಳೆ ನಿಂತು ನಿಂತು ಬರುತ್ತಿರುವ ಪರಿಣಾಮ ನೀರು ನಿಂತಲ್ಲೇ ನಿಂತು ಲಾರ್ವಾ ಉತ್ಪತ್ತಿಯಾಗಿ ಸೊಳ್ಳೆಗಳು ಹೆಚ್ಚಾಗುತ್ತಿವೆ. ಒಮ್ಮೆಲೆ ಜೋರಾಗಿ ಮಳೆ ಬಂದರೆ ಸೊಳ್ಳೆಗಳ ಉತ್ಪತ್ತಿ ತಾಣಗಳು ನಾಶವಾಗುತ್ತದೆ. ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಉದ್ದೇಶದಿಂದ ಔಷಧಿ ಸಿಂಪಡಣೆ ಮಾಡುವ ಹಾಗೂ ಫಾಗಿಂಗ್ ಮಾಡುವ ಸಿಬ್ಬಂದಿಯ ಸಂಖ್ಯೆಯನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸಲು ವಲಯ ಆಯುಕ್ತರಿಗೆ ಸೂಚಿಸಲಾಗಿದೆ" ಎಂದು ಹೇಳಿದರು.
ರಸ್ತೆ ಗುಂಡಿಗಳನ್ನು ಮುಚ್ಚುವ ಕುರಿತು ವಿನೂತನ ತಂತ್ರಾಂಶ: "ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ರಸ್ತೆ ಗುಂಡಿಗಳನ್ನು ನಿರಂತರವಾಗಿ ಮುಚ್ಚಲಾಗುತ್ತಿದ್ದು, ಹೊಸದಾಗಿ ಸೃಷ್ಟಿಯಾಗುವ ರಸ್ತೆ ಗುಂಡಿಗಳನ್ನು ಗುರುತಿಸಿ ಮುಚ್ಚುವ ಕಾರ್ಯ ಮಾಡಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ನಿಟ್ಟಿನಲ್ಲಿ ವಿನೂತನ ತಂತ್ರಾಂಶವನ್ನು ಬಿಡುಗಡೆಗೊಳಿಸಲಾಗುತ್ತಿದೆ. ಈ ತಂತ್ರಾಂಶದಲ್ಲಿ ಅಧಿಕಾರಿಗಳು ಮಾತ್ರವಲ್ಲದೆ ನಾಗರೀಕರಿಗೂ ರಸ್ತೆ ಗುಂಡಿಗಳು ಬಿದ್ದಿರುವ ಬಗ್ಗೆ ಅಪ್ಲೋಡ್ ಮಾಡಲು ಅವಕಾಶ ನೀಡಲಾಗುವುದು. ಇದರಿಂದ ತ್ವರಿತಗತಿಯಲ್ಲಿ ರಸ್ತೆಗುಂಡಿಗಳನ್ನು ಮುಚ್ಚಲು ಸಹಕಾರಿಯಾಗಲಿದೆ" ಎಂದು ಹೇಳಿದರು.
ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಶಿವಾನಂದ್ ಕಲ್ಕೆರೆ, ವಲಯ ಆಯುಕ್ತರಾದ ಡಾ.ಆರ್.ಎಲ್.ದೀಪಕ್, ರಮೇಶ್, ಶಿವಾನಂದ್ ಕಪಾಶಿ, ಸ್ನೇಹಲ್, ವಿನೋತ್ ಪ್ರಿಯಾ, ರಮ್ಯಾ, ಪ್ರೀತಿ ಗೆಹ್ಲೋಟ್, ವಲಯ ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.