ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ವಿರುದ್ಧ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆಲುವಿನ ನಗೆ ಬೀರಿದ್ದಾರೆ.
ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿದ್ದ ಈ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ಮಾಡಿದ್ದರು. ಬಹಿರಂಗ ಸಮಾವೇಶ, ರೋಡ್ ಶೋ, ಮನೆ ಮನೆ ಭೇಟಿ ಸೇರಿದಂತೆ ಮತದಾರರನ್ನು ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸಿದ್ದರು. ಅಭ್ಯರ್ಥಿಗಳ ನಡುವೆ ಟಾಕ್ ವಾರ್ ಕೂಡ ಜೋರಾಗಿತ್ತು.
ಪುತ್ರ ಮೃಣಾಲ್ ಪರ ಲಕ್ಷ್ಮೀ ಹೆಬ್ಬಾಳ್ಕರ್ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಓಡಾಡಿದ್ದರು. ಇನ್ನು ಜಗದೀಶ್ ಶೆಟ್ಟರ್ ಬೆನ್ನಿಗೆ ಅಂಗಡಿ ಕುಟುಂಬ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿಂತಿದ್ದರು. ಅಂತಿಮವಾಗಿ ಶೆಟ್ಟರ್ ವಿಜಯ ಪತಾಕೆ ಹಾರಿಸಿದ್ದಾರೆ.
ಕ್ಷೇತ್ರದ ಕುರಿತು: 8 ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿರುವ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಮೇ 7ರಂದು ನಡೆದ ಚುನಾವಣೆಯಲ್ಲಿ 13,75,283 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು. ಶೇ.71.49 ವೋಟಿಂಗ್ ಆಗಿತ್ತು.
ಬೆಳಗಾವಿ ಬಿಜೆಪಿ ಭದ್ರಕೋಟೆ: 2004ರಿಂದ ಬೆಳಗಾವಿ ಬಿಜೆಪಿ ಭದ್ರಕೋಟೆಯಾಗಿದೆ. ಸತತ ನಾಲ್ಕು ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ ಅಕಾಲಿಕ ನಿಧನದಿಂದಾಗಿ 2021ರಲ್ಲಿ ಉಪ ಚುನಾವಣೆ ನಡೆದಿತ್ತು. ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.
ಇದನ್ನೂ ಓದಿ: ಸಂತಾನ ಭಾಗ್ಯಕ್ಕಾಗಿ ದಂಪತಿಗೆ ಪೆರೋಲ್ ನೀಡಿದ ಹೈಕೋರ್ಟ್ - High Court Grants Parole