ಬೆಂಗಳೂರು : ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಇಂದು ಸಂಜೆ ತಾಯಿ ಭುವನೇಶ್ವರಿಯ ವೈಭವದ ಪುತ್ಥಳಿ ಅನಾವರಣಗೊಳಿಸಿ ಮಾತನಾಡಿದ ಅವರು, ನಾವು ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು ಎಂದು ಕರೆ ನೀಡಿದರು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ, ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವ ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆ, ಸಂಸ್ಕೃತಿ, ಕಲೆಯ ಬಗ್ಗೆ ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ - ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ ಭಾಷೆಯಾಗುತ್ತದೆ ಎಂದರು.
ನಾವು ನಮ್ಮ ಸಹೋದರ ಮತ್ತು ಇತರ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಾಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು ಎಂದು ಕರೆ ನೀಡಿದರು. ಇತರ ಭಾಷೆಯಲ್ಲಿ ತಪ್ಪು ತಪ್ಪಾಗಿ ಮಾತನಾಡುವುದಕ್ಕಿಂತ ನಮ್ಮದೇ ಭಾಷೆಯಲ್ಲಿ ಮಾತಾಡಬೇಕು. ಅಕ್ಕ ಪಕ್ಕದ ಎಲ್ಲಾ ರಾಜ್ಯಗಳಲ್ಲೂ ಆಯಾ ರಾಜ್ಯದ ಜನರಾಡುವ ಭಾಷೆಯೇ ಸಾರ್ವಭೌಮ. ನಮ್ಮಲ್ಲೂ ಇದನ್ನೇ ಆಚರಿಸಬೇಕು ಎಂದು ಕರೆ ನೀಡಿದರು.
ಒಂದು ಭಾಷೆ ಮಾತನಾಡುವ ಜನ ಒಂದು ಆಡಳಿತದ ಸೂರಿನಡಿ ಬರಬೇಕು ಎನ್ನುವುದು ಕನ್ನಡ ಏಕೀಕರಣ ಚಳವಳಿಯ ಆಶಯವಾಗಿತ್ತು. ಈ ಆಶಯ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಕನ್ನಡ ಓದುವುದನ್ನು, ಬರೆಯುವುದನ್ನು ಹೆಚ್ಚೆಚ್ಚು ಕಲಿಯಬೇಕು, ಕಲಿಸಬೇಕು ಎಂದು ಹೇಳಿದರು.
ಕನ್ನಡ ಭಾಷೆ, ನೆಲ, ಜಲ ವಿಚಾರದಲ್ಲಿ ಯಾವುದೇ ರಾಜೀ ಪ್ರಶ್ನೆಯೇ ಇಲ್ಲ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಮಾತನಾಡಿ, ಕರ್ನಾಟಕದಲ್ಲಿ ಇರುವುದು ಕನ್ನಡ ಮತ್ತು ಕನ್ನಡಿಗರ ಸರ್ಕಾರ ಎಂದು ಅವರು ಹೇಳಿದರು.
ಕರ್ನಾಟಕ ಸುವರ್ಣ ಮಹೋತ್ಸವದ ಹಿನ್ನೆಲೆಯಲ್ಲಿ ವರ್ಷವಿಡೀ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ. ಅದರಂತೆ ಭುವನೇಶ್ವರಿ ತಾಯಿ ಪ್ರತಿಮೆ ನಿರ್ಮಾಣ ಮಾಡಲು ನಿರ್ಧರಿಸಲಾಗಿತ್ತು. ಹೀಗಾಗಿ ಶಕ್ತಿಸೌಧದ ಆವರಣದಲ್ಲಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಭುವನೇಶ್ವರಿ ತಾಯಿ ನಾಡಿನ ಪ್ರತೀಕ. ನಿಜಕ್ಕೂ ಇದು ಐತಿಹಾಸಿಕವಾದ ಕ್ಷಣ. ನಾನು ಸಚಿವನಾದ ಬಳಿಕ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲು ಸಾಧ್ಯವಾಗಿದ್ದು, ನನ್ನ ಪುಣ್ಯ. ನಮ್ಮ ಸರ್ಕಾರ ಎಂದೆಂದಿಗೂ ಕನ್ನಡಿಗರ ಪರ ಇರುವ ಸರ್ಕಾರ. ಕನ್ನಡದ ಭಾಷೆ, ನೆಲ, ಜಲ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ವೇದಿಕೆ ಮೂಲಕ ಸಚಿವರು ಸಂದೇಶ ರವಾನಿಸಿದರು.
ಹಿಂದೆ ಬದಂತಹ ಮುಖ್ಯಮಂತ್ರಿಗಳು, ಸರ್ಕಾರಗಳೆಲ್ಲಾ ಕೇವಲ ಬಾಯಿ ಮಾತಿಗೆ ಕನ್ನಡ ಭಾಷೆ ಬಗ್ಗೆ ಕೇವಲ ಆದೇಶಗಳನ್ನು ಮಾತ್ರ ಮಾಡಿದರು. ಆದರೆ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಾಣಿಜ್ಯ, ಕೈಗಾರಿಕೆ, ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಇರಬೇಕು ಎಂದು ಐತಿಹಾಸಿಕವಾದ ಕಾನೂನನ್ನು ಜಾರಿಗೆ ತರಲಾಯಿತು. ಪರಿಣಾಮ ರಾಜ್ಯದ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ರಾರಾಜಿಸುತ್ತಿದೆ ಎಂದರು.
ಇನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪೂರ್ಣ ಆಂಗ್ಲಮಯವಾಗಿತ್ತು. ಆದರೆ ವಿಮಾನ ನಿಲ್ದಾಣದ ನಾಮಫಲಕ ಸೇರಿದಂತೆ ಗೋಡೆ ಬರಹಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸೂಚಿಸಲಾಯಿತು. ಪರಿಣಾಮ ವಿಮಾನ ನಿಲ್ದಾಣದಲ್ಲಿ ಕನ್ನಡ ಭಾಷೆ ಹೆಚ್ಚಿರುವುದನ್ನು ನಾವು ಕಾಣಬಹುದು ಎಂದು ತಿಳಿಸಿದರು.
ಅನುದಾನಕ್ಕೆ ಮನವಿ : ಗೋವಾ ರಾಜ್ಯದಲ್ಲಿ ಅತಿಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ನೆಲೆಸಿದ್ದಾರೆ. ಅಲ್ಲಿನ ಕನ್ನಡಿಗರಿಗೆ ಕನ್ನಡ ಭವನ ನಿರ್ಮಿಸಲು ಅಲ್ಲಿನ ಸರ್ಕಾರದ ಜತೆ ಈಗಾಗಲೇ ಚರ್ಚೆ ಕೂಡ ನಡೆಸಲಾಗಿದ್ದು, ಸ್ಥಳವನ್ನು ಗುರುತಿಸಲಾಗಿದೆ. ಇದಕ್ಕೆ ಬೇಕಾದ ಅನುದಾನ ಬಿಡುಗಡೆ ಮಾಡಬೇಕು ಎಂದು ಸಚಿವರು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೇ ವೇಳೆ ಮನವಿ ಮಾಡಿದರು.
ಕರಾಳ ದಿನಾಚರಣೆ ಆಚರಣೆಗೆ ಬ್ರೇಕ್ : ಇನ್ನು ಪ್ರತಿವರ್ಷ ನವೆಂಬರ್ 1ರ ರಾಜ್ಯೋತ್ಸವದಂದು ಎಂಇಎಸ್ನವರು ಬೆಳಗಾವಿಯಲ್ಲಿ 'ಕರಾಳ ದಿನ'ವನ್ನು ಆಚರಣೆ ಮಾಡುತ್ತಿದ್ದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರ ನೇತೃತ್ವದ ನಮ್ಮ ಸರ್ಕಾರ ಕರಾಳ ದಿನ ಆಚರಣೆಗೆ ಯಾವುದೇ ಅವಕಾಶ ನೀಡಲಿಲ್ಲ. ಈ ಮೂಲಕ ಕನ್ನಡಿಗರೇ ಕರ್ನಾಟಕದಲ್ಲಿ ಸಾರ್ವಭೌಮರು ಎಂಬ ಸಂದೇಶವನ್ನು ರವಾನಿಸಿದ್ದೇವೆ ಎಂದು ಸಚಿವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು. ಟಿ ಖಾದರ್ ಫರೀದ್, ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ನಗರಾಭಿವೃದ್ಧಿ ಸಚಿವ ಸುರೇಶ್ ಬಿ. ಎಸ್, ವಿಧಾನ ಪರಿಷತ್ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ದೆಹಲಿ ಪ್ರತಿನಿಧಿ ಟಿ. ಬಿ ಜಯಚಂದ್ರ, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ : ಗಣರಾಜ್ಯೋತ್ಸವ ಸಂಭ್ರಮ ; ರಾಜಭವನ ಸಾರ್ವಜನಿಕ ವೀಕ್ಷಣೆಗೆ ಅವಕಾಶ - RAJ BHAVAN OPEN FOR PUBLIC