ಬೀದರ್: ಬ್ಯಾಂಕ್ ದರೋಡೆ ಸಂದರ್ಭದಲ್ಲಿ ದರೋಡೆಕೋರರ ಗುಂಡೇಟಿಗೆ ಬಲಿಯಾದ ಬೆಮಲಖೇಡ ಗ್ರಾಮದ ಗಿರಿ ವೆಂಕಟೇಶ ಅವರ ಮನೆಗೆ ಇಂದು ಭೇಟಿ ನೀಡಿದ ಸಚಿವ ಈಶ್ವರ್ ಖಂಡ್ರೆ ಅವರು ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಸರ್ಕಾರದ ಹಣವನ್ನು ಕಾಪಾಡುವ ನಿಟ್ಟಿನಲ್ಲಿ ಬಲಿಯಾದ ಗಿರಿ ಕುಟುಂಬಕ್ಕೆ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ದೊರಕಬೇಕಾದ ಎಲ್ಲ ಸಹಾಯ ಸವಲತ್ತುಗಳನ್ನು ದೊರಕಿಸಿಕೊಡಲಾಗುವುದು ಎಂದು ಸಚಿವರು ಮೃತ ವ್ಯಕ್ತಿಯ ಕುಟುಂಬಸ್ಥರಿಗೆ ಇದೇ ವೇಳೆ ಭರವಸೆ ನೀಡಿದರು.
ಅಲ್ಲದೇ ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಚರ್ಚಿಸಲಾಗಿದ್ದು, ಕುಟುಂಬಕ್ಕೆ ಹೆಚ್ಚುವರಿಯಾಗಿ 10 ಲಕ್ಷ ರೂ.ಗಳನ್ನು ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆಯಿಂದ 8 ಲಕ್ಷ ರೂ. ಪರಿಹಾರ ಹಾಗೂ ಅವರ ತಾಯಿಗೆ 5 ಸಾವಿರ ರೂ. ಮಾಸಾಶನ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸಮಾಜ ಕಲ್ಯಾಣ ಇಲಾಖೆಯಡಿ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲಾಗುವುದು ಎಂದು ಸಚಿವರು ತಿಳಿಸಿದರು.
ಈಗಾಗಲೇ ಹೈದರಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಅವರ ಚಿಕಿತ್ಸೆ ವೆಚ್ಚ ಭರಿಸಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಮಾಜ ಕಲ್ಯಾಣ ಇಲಾಖೆಯಿಂದ ದೊರಯಬೇಕಾದ ಪರಿಹಾರ ಸಹಾಯಗಳನ್ನು ತಕ್ಷಣವೇ ಒದಗಿಸುವಂತೆ ಸ್ಥಳದಲ್ಲೇ ಉಪಸ್ಥಿತರಿದ್ದ ಉಪ ನಿರ್ದೇಶಕರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಹಾಗೂ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.