ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಹತ್ಯೆಯು ಹುಬ್ಬಳ್ಳಿಯಲ್ಲಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಅಂಜಲಿ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ರ್‍ಯಾಲಿ ನಡೆಸಿದರು.
ನಗರದ ವೀರಾಪೂರ ಓಣಿಯಿಂದ ಶಹರ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು, ಪಗಡಿಗಲ್ಲಿಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಅವಳಿ ನಗರದಲ್ಲಿ ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಹಾಗೂ ಸರ್ಕಾರ ಮಹಿಳೆಯರಿಗೆ ರಕ್ಷಣೆಯನ್ನು ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಎನ್ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.
ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಹರ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಿದ್ದು ಕಂಡುಬಂತು.
ಬಿಜೆಪಿ ಕಾರ್ಯಕರ್ತರು ಪೊಲೀಸರ ವಶ : ಅಂಜಲಿ ಹತ್ಯೆ ಖಂಡಿಸಿ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆ ಆರೋಪಿ ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.
ಇದನ್ನೂ ಓದಿ : ಅಂಜಲಿ ಕುಟುಂಬದ ಶಿಕ್ಷಣದ ಜವಾಬ್ದಾರಿಯನ್ನು ಶಿರಹಟ್ಟಿಯ ಮಠ ನೋಡಿಕೊಳ್ಳುತ್ತದೆ; ಫಕೀರ ದಿಂಗಾಲೇಶ್ವರ ಶ್ರೀ - Anjali Murder Case