ಬೆಂಗಳೂರು : ಕೇಂದ್ರ ಸರ್ಕಾರದ ವಿರುದ್ಧ ರ್‍ಯಾಲಿ ಅಥವಾ ಪ್ರತಿಭಟನೆ ನಡೆಸುವ ಕುರಿತು ತಿಳಿಸಲು ಜನರ ತೆರಿಗೆ ಹಣ ಬಳಸಿ ಜಾಹೀರಾತು ನೀಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯ ಬಿಜೆಪಿ ನಿಯೋಗವು ಇಂದು ರಾಜಭವನಕ್ಕೆ ಭೇಟಿ ನೀಡಿತ್ತು. ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ಕಾರ್ಯದರ್ಶಿಗೆ ರಾಜ್ಯ ಸರ್ಕಾರದ ವಿರುದ್ಧ ದೂರು ಸಲ್ಲಿಸಿತು. ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಲು ರಾಜ್ಯದ ಜನರ ತೆರಿಗೆ ಹಣವನ್ನು ಬಳಸಿದ ಕುರಿತು ಆಕ್ಷೇಪಿಸುವ ಮನವಿಯನ್ನು ಅಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಾಯಿತು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹರತಾಳು ಹಾಲಪ್ಪ, ಮುಖಂಡ ಭಾಸ್ಕರ ರಾವ್, ವಕೀಲರ ಸಂಘದ ಅಧ್ಯಕ್ಷ ವಿವೇಕ ರೆಡ್ಡಿ ಅವರ ನಿಯೋಗವು ಈ ಮನವಿ ಸಲ್ಲಿಸಿತು.
ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ರೀತಿಯ ಮತ್ತು ಈ ಮೂಲಕ ಸಂವಿಧಾನಕ್ಕೆ ಅಗೌರವ ತರುವ ಕೆಲಸವನ್ನು ಈ ಜಾಹೀರಾತಿನ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ‘ನನ್ನ ತೆರಿಗೆ ನನ್ನ ಹಕ್ಕು’ ಎಂಬ ಶೀರ್ಷಿಕೆಯ ಈ ಜಾಹೀರಾತಿನ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ದೆಹಲಿ ಚಲೋ ನಡೆಸಲು ಕರೆ ನೀಡಿರುವುದು ಆಘಾತಕರ ಎಂದು ದೂರಿನಲ್ಲಿ ವಿವರಿಸಿದ್ದಾರೆ.
ರಾಜ್ಯದ ಜನರನ್ನು ತಪ್ಪು ದಾರಿಗೆಳೆಯುವ ಅಂಕಿ-ಅಂಶಗಳನ್ನು ಈ ಜಾಹೀರಾತು ಒಳಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ರಾಜಕಾರಣ ಮಾಡಲು ಈ ಜಾಹೀರಾತು ಕೊಟ್ಟಿದ್ದಾರೆ. ಇದರ ವಿರುದ್ಧ ಬಿಜೆಪಿ ಆಕ್ಷೇಪ ವ್ಯಕ್ತಪಡಿಸುವುದಾಗಿ ಮನವಿಯಲ್ಲಿ ಹೇಳಲಾಗಿದೆ.
ಕೇಂದ್ರ ಸರ್ಕಾರದ ವಿರುದ್ಧ ರ್‍ಯಾಲಿ ಅಥವಾ ಪ್ರತಿಭಟನೆ ನಡೆಸುವ ಕುರಿತು ತಿಳಿಸಲು ಈ ಜಾಹೀರಾತು ನೀಡಿದ್ದು, ಇದು ಖಜಾನೆಯ ಹಣದ ದುರ್ಬಳಕೆ ಮತ್ತು ಮೋಸಗಾರಿಕೆ ಎಂದು ಆಕ್ಷೇಪ ವ್ಯಕ್ತಪಡಿಸಲಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಜಾಹೀರಾತಿನ ಮೂಲಕ ಸಾಂವಿಧಾನಿಕ ಬಿಕ್ಕಟ್ಟು ಉದ್ಭವಿಸಿದ್ದು, ರಾಜ್ಯಪಾಲರು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ರಾಜ್ಯದ ವಾರ್ತಾ ಮತ್ತು ಪ್ರಸಾರ ಇಲಾಖೆ ಕಮೀಷನರ್ ಅವರಿಗೆ ಇಂಥ ಜಾಹೀರಾತು ನೀಡುವುದನ್ನು ನಿಲ್ಲಿಸುವಂತೆ ನಿರ್ದೇಶನ ನೀಡಬೇಕೆಂದು ಕೂಡ ಮನವಿ ಮಾಡಲಾಗಿದೆ ಎಂದು ಬಿಜೆಪಿ ತಿಳಿಸಿದೆ.
ಇದನ್ನೂ ಓದಿ : ಸಚಿವ ಸತೀಶ ಜಾರಕಿಹೊಳಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಬಿಜೆಪಿ ನಿಯೋಗ