ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಚುನಾವಣೆ ಮೇ 7 ರಂದು ನಡೆಯಲಿದ್ದು, ರಾಜಕೀಯ ನಾಯಕರ ಚಿತ್ತ ಈಗ ಶಿವಮೊಗ್ಗದತ್ತ ಹರಿದಿದೆ. ಕರ್ನಾಟಕದಲ್ಲಿ ನಡೆದ ಮೊದಲ ಹಂತದ ಚುನಾವಣೆ ಮುಗಿದ ನಂತರ ಈಗ ನಾಯಕರು ಉಳಿದ ಕ್ಷೇತ್ರದ ಕಡೆ ತಮ್ಮ ಗಮನ ಹರಿಸುತ್ತಿದ್ದಾರೆ. ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಈಗ ಶಿವಮೊಗ್ಗ ಕ್ಷೇತ್ರಕ್ಕೆ ದೌಡಾಯಿಸುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ವರಿಷ್ಠರು ತಮ್ಮ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಆಗಮಿಸುತ್ತಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಆಗಮನ: ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಈಟಿವಿ ಭಾರತದೊಂದಿಗೆ ಮಾತನಾಡಿ, ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಆಗಮಿಸಿ ನನ್ನ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಈಗ ನಮ್ಮ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಅವರು ಏಪ್ರಿಲ್ 30 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಿ, ಅಂದು ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಅಲ್ಲದೇ ಜಿಲ್ಲಾ ಪ್ರವಾಸ ಕೈಗೊಳ್ಳಲಿರುವ ನಡ್ಡಾ ಅವರು ರೋಡ್ ಶೋದಲ್ಲಿ ಭಾಗಿಯಾಗುವರು. ಅಂದು ಬಿಜೆಪಿ ಪ್ರಮುಖರ ಜೊತೆ ಸಭೆಯನ್ನು ಸಹ ನಡೆಸಲಿದ್ದಾರೆ ಎಂದು ತಿಳಿಸಿದರು.
ಎಐಸಿಸಿ ನಾಯಕ ರಾಹುಲ್ ಗಾಂಧಿ: ಸಚಿವ ಮಧು ಬಂಗಾರಪ್ಪ ಈಟಿವಿ ಭಾರತದೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪರ ಪ್ರಚಾರ ನಡೆಸಲು ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿ ಅವರು ಮೇ 2 ರಂದು ಶಿವಮೊಗ್ಗಕ್ಕೆ ಅಗಮಿಸುತ್ತಾರೆ. ಅಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ಆಗಮಿಸುವ ರಾಹುಲ್ ಗಾಂಧಿ ಅವರು ಶಿವಮೊಗ್ಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶವು ನಗರದ ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದ್ದು, ಅಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಇತರೆ ನಾಯಕರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ನಾಳೆ ಶಿವಮೊಗ್ಗಕ್ಕೆ ಹೆಚ್ ಡಿ ಕುಮಾರಸ್ವಾಮಿ: ಬಿಜೆಪಿ- ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಶಿವಮೊಗ್ಗ ಗ್ರಾಮಾಂತರ ಹಾಗೂ ಭದ್ರಾವತಿ ಕ್ಷೇತ್ರದ ಪ್ರಚಾರಕ್ಕೆ ನಾಳೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಆಗಮಿಸಲಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ, ಭದ್ರಾವತಿ ಕ್ಷೇತ್ರದಲ್ಲಿ ರೋಡ್ ಶೂ ನಡೆಸಲಿದ್ದಾರೆ.
ಸಚಿವ ಸಂತೋಷ್ ಲಾಡ್: ಅದೇ ರೀತಿ ಕಲಘಟಗಿ ಶಾಸಕ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸೋಮವಾರ ಶಿವಮೊಗ್ಗಕ್ಕೆ ಅಗಮಿಸಲಿದ್ದಾರೆ. ಶಿಕಾರಿಪುರದಲ್ಲಿ ಪ್ರಚಾರ ಸಭೆ ನಡೆಸಿ, ನಂತರ ಗೀತಾ ಶಿವರಾಜ ಕುಮಾರ್ ಅವರ ಜೊತೆ ರಿಪ್ಪನಪೇಟೆ, ತೀರ್ಥಹಳ್ಳಿ ಭಾಗದಲ್ಲಿ ರೋಡ್ ಶೋ ನಲ್ಲಿ ಭಾಗಿಯಾಗಲಿದ್ದಾರೆ. ಅವರೊಂದಿಗೆ ಸಿನಿಮಾ ತಾರೆಯರು ಸಹ ಭಾಗಿಯಾಗಲಿದ್ದಾರೆ.
ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಮ್ಮ ಪುತ್ರನ ಪರ ಶಿಕಾರಿಪುರದಲ್ಲಿ ಪ್ರಚಾರ ನಡೆಸುವ ಜೊತೆಗೆ ಬೇರೆ ಬೇರೆ ಕ್ಷೇತ್ರದಲ್ಲಿಯೂ ಮತಬೇಟೆ ನಡೆಸುತ್ತಿದ್ದಾರೆ. ಇನ್ನು ಬಿಜೆಪಿ ರಾಜಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಳೆದ ಎರಡು ದಿನ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಮುಂದಿನ ಒಂದು ವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾಯಕರ ದಂಡು ಸೇರಿದಂತೆ ಸಿನಿಮಾ ತಾರೆಯರ ದಂಡು ಆಗಮಿಸಲಿದೆ ಎಂದು ತಿಳಿಸಿದರು.
ಇದನ್ನೂಓದಿ:ಕಾಂಗ್ರೆಸ್ನವರದ್ದು ಓಲೈಕೆ ರಾಜಕಾರಣ: ಅರ್ಜುನ್ ರಾಮ್ ಮೇಘವಾಲ್ - LOK SABHA ELECTION