ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರಾದ್ಯಂತ ಸಂಚಾರ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದೆರಡು ತಿಂಗಳಿನಿಂದ ಜಿಲ್ಲೆ ಹಾಗೂ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಈ ಮೂಲಕ ಚುನಾವಣಾ ಅಖಾಡವನ್ನು ಸಜ್ಜುಗೊಳಿಸುತ್ತಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸಲು ಸನ್ನದ್ಧವಾಗಿವೆ. ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನೂ ಕೂಡ ಸೋಮಣ್ಣ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮತ್ತೊಂದೆಡೆ, ಜಿಲ್ಲೆಯ ಬಹುತೇಕ ಎಲ್ಲಾ ಸಮುದಾಯದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ.
ಲಿಂಗಾಯತ, ಗೊಲ್ಲ, ಒಕ್ಕಲಿಗ ಸಮುದಾಯದ ನಾಯಕರನ್ನು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ಪೂರ್ಣಗೊಳಿಸಿದ್ದಾರೆ. ರಾಜಕೀಯ ಮುಖಂಡರ ಮದುವೆ ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.
ಗುಬ್ಬಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದ ವೇಳೆ ಹಾಲಿ ತುಮಕೂರು ಸಂಸದ ಜಿ.ಎಸ್.ಬಸವರಾಜು ಸಾಥ್ ನೀಡಿರುವುದು ಕೂಡ ಲೋಕಸಭಾ ಚುನಾವಣೆಯಲ್ಲಿ ಸೋಮಣ್ಣ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬುದಕ್ಕೆ ಪುಷ್ಠಿ ನೀಡಿದಂತಿದೆ.
ಕಳೆದ ಎರಡು ತಿಂಗಳಷ್ಟೇ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಗುರು ಭವನ ನಿರ್ಮಿಸಿ ಅದನ್ನು ಮಠಕ್ಕೆ ಹಸ್ತಾಂತರಿಸುವ ಕಾರ್ಯಕ್ರಮ ಆಯೋಜಿಸುವ ಮೂಲಕ ಅಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಬಿಜೆಪಿ ಪಕ್ಷದ ಮುಖಂಡರನ್ನು ಒಂದೆಡೆ ಸೇರಿಸಿ ಎಲ್ಲರ ವಿಶ್ವಾಸ ಪಡೆದುಕೊಳ್ಳುವ ಕಸರತ್ತು ನಡೆಸಿದ್ದರು.
ಈ ಹಿಂದೆಯೂ ಕೂಡ ಹಾಲಿ ಸಂಸದ ಜಿ.ಎಸ್.ಬಸವರಾಜು, ಬಿಜೆಪಿ ಹೈಕಮಾಂಡ್ ಬಳಿ ಸೋಮಣ್ಣ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು. ಇದಕ್ಕೆ ನಾವು ಸಂಪೂರ್ಣ ರೀತಿಯಲ್ಲಿ ಸಹಕಾರ ನೀಡುತ್ತೇವೆ ಎಂಬ ಇಂಗಿತ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಅಮಿತ್ ಶಾ ಜೊತೆ ಮಾತುಕತೆ ಫಲಪ್ರದ, ಎಲ್ಲಾ ಸಮಸ್ಯೆಗಳು ಸುಖಾಂತ್ಯ: ವಿ.ಸೋಮಣ್ಣ