ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುತ್ತಿರುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ, ಪ್ರತಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ನೇತೃತ್ವದಲ್ಲಿ ಇಂದು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಸವದತ್ತಿಗೆ ತೆರಳುತ್ತಿದ್ದರು. ಸಿಎಂ ಸಾಗುವ ಮಾರ್ಗವಾದ ನಗರದ ಗೋಕುಲ್ ರಸ್ತೆಯ ಅಕ್ಷಯ ಪಾರ್ಕ್ ಬಳಿ ಬಿಜೆಪಿ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು, ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆದು ನಡೆಸುತ್ತಿದ್ದ ಪ್ರತಿಭಟನಾ ಕಾವು ಹೆಚ್ಚಾಗುತ್ತಿದ್ದಂತೆ, ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೂ ಬಿಜೆಪಿ ಮುಖಂಡರು ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣಾ ಮಜ್ಜಗಿ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಇದ್ದರು.
ಇದನ್ನೂ ಓದಿ: 'ಬಿಜೆಪಿಯವರು ಆರ್ಎಸ್ಎಸ್ ಮೇಲಿನ ಕೇಸ್ ವಾಪಸ್ ಪಡೆದಿದ್ದರಲ್ಲವೇ?': ಸಿಎಂ ಸಿದ್ದರಾಮಯ್ಯ