ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ (ಬಿಎಂಟಿಸಿ) ಖಾಲಿ ಇರುವ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳಿಗೆ ಭಾನುವಾರ ರಾಜ್ಯದ ಆರು ಜಿಲ್ಲೆಗಳ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹೈದರಾಬಾದ್ ಕರ್ನಾಟಕದವರಿಗಾಗಿ ಜುಲೈ 14 ರಂದು ಪರೀಕ್ಷೆ ನಡೆಸಲಾಗಿತ್ತು. ಹೈದರಾಬಾದ್ ಕರ್ನಾಟಕ ಹೊರಗಿನ ಅಭ್ಯರ್ಥಿಗಳಿಗೆ ಭಾನುವಾರ ಪರೀಕ್ಷೆ ನಡೆಯಲಿದ್ದು, ಕಟ್ಟುನಿಟ್ಟಿನ ನಿಗಾಕ್ಕೆ ಕ್ರಮ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಹೈದರಾಬಾದ್ ಕರ್ನಾಟಕದವರೂ ಬರೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಂಡಕ್ಟರ್ ಹುದ್ದೆಗೆ 23 ಸಾವಿರ ಜನ ಅರ್ಜಿ: ಪರೀಕ್ಷೆಗೆ 23,000 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅಭ್ಯರ್ಥಿಗಳಿಗೆ ಡ್ರೆಸ್ ಕೋಡ್ ಇದ್ದು, ಆ ಪ್ರಕಾರವೇ ಎಲ್ಲರೂ ಪರೀಕ್ಷೆಗೆ ಹಾಜರಾಗಬೇಕು. ಬೆಂಗಳೂರು, ಬಳ್ಳಾರಿ, ಧಾರವಾಡ, ಕಲಬುರಗಿ, ದಾವಣಗೆರೆ, ಮಂಡ್ಯ ಜಿಲ್ಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ ಮತ್ತು ಮಧ್ಯಾಹ್ನ ಎರಡು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ ಎಂದು ವಿವರಿಸಿದ್ದಾರೆ.
ಪರೀಕ್ಷಾ ಕೇಂದ್ರ ಸುತ್ತಮುತ್ತಾ ನಿಷೇಧಾಜ್ಞೆ: ಪರೀಕ್ಷೆಯು ಸುಗಮ ಮತ್ತು ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಲಾಗಿದೆ. ಪರೀಕ್ಷೆ ವೇಳೆ ಸಮಯದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುವ ಸಮಯದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಘೋಷಿಸಿ ಪ್ರತಿಬಂಧಕಾಜ್ಞೆಯನ್ನು ವಿಧಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ - Guest Lecturers Recruitment