ರಾಮನಗರ: ಮಹಿಳೆ ಮೇಲೆ ಅತ್ಯಾಚಾರ ಆರೋಪದ ಮೇಲೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಜನರ ವಿರುದ್ಧ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ. ಈ ಸಂಬಂಧ ಮಹಿಳೆಯೊರ್ವಳು ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ಸ್ಥಳ ಮಹಜರು ಮಾಡಲಾಗಿದೆ ಎಂದು ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.
ತನ್ನನ್ನು ಗೋಡೌನ್ಗೆ ಕರೆಯಿಸಿಕೊಂಡು ಮುನಿರತ್ನ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ವಿಡಿಯೋ ಸೆರೆಹಿಡಿದುಕೊಂಡು, ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬುಧವಾರ ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು. ಇದೇ ವೇಳೆ, ಬೆದರಿಸಿ ತನ್ನಿಂದ ಹಲವು ಕೆಲಸಗಳನ್ನು ಮಾಡಿಸಿಕೊಂಡಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಬಗ್ಗೆ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 1860, 354ಸಿ ಸೇರಿದಂತೆ ವಿವಿಧ ಕಲಂಗಳಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಬಗ್ಗೆ ರಾಮನಗರದಲ್ಲಿ ಮಾತನಾಡಿದ ಎಸ್ಪಿ ಕಾರ್ತಿಕ್ ರೆಡ್ಡಿ, ''ನಿನ್ನೆಯಷ್ಟೇ ಮಹಿಳೆಯೊಬ್ಬರು ತನಗಾದ ಅನ್ಯಾಯದ ಬಗ್ಗೆ ಆರ್.ಆರ್. ನಗರದ ಶಾಸಕರು ಸೇರಿದಂತೆ 7 ಜನರ ವಿರುದ್ಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಗಂಭೀರ ಸ್ವರೂಪ ಇರುವ ಕಾರಣ ರಾಮನಗರ ಡಿವೈಎಸ್ಪಿಗೆ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಪ್ರಕರಣ ಸಂಬಂಧ ಮಹಿಳೆಯನ್ನು ಕರೆದೊಯ್ದು ಸ್ಥಳ ಮಹಜರು ನಡೆಸಿ, ತನಿಖೆ ಮಾಡಲಾಗಿದೆ'' ಎಂದು ತಿಳಿಸಿದ್ದಾರೆ.
''ನ್ಯಾಯಾಲಯದ ನಿರ್ದೇಶನದ ಮೇರೆಗೆ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಈಗಲೇ ಹೇಳಲು ಆಗುವುದಿಲ್ಲ. ಇದೊಂದು ಗಂಭೀರ ಪ್ರಕರಣ ಆಗಿರುವುದರಿಂದ ರಾಮನಗರ ಡಿವೈಎಸ್ಪಿ ತನಿಖೆ ನಡೆಸುತ್ತಿದ್ದಾರೆ. ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್ ಕುಮಾರ್, ಸುಧಾಕರ್, ಲೋಹಿತ್ ಗೌಡ, ಮಂಜುನಾಥ, ಲೋಕಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ'' ಎಂದು ಎಸ್ಪಿ ಮಾಹಿತಿ ನೀಡಿದರು.