ಮಂಗಳೂರು (ದಕ್ಷಿಣ ಕನ್ನಡ) : ಶಾಲೆಯೊಂದರ ಮುಂಭಾಗ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ ಮತ್ತು ನಿಂದನೆ ಹಾಗೂ ವಿವಿಧ ಆರೋಪಗಳ ಮೇಲೆ ಇಬ್ಬರು ಬಿಜೆಪಿ ಶಾಸಕರು ಸೇರಿದಂತೆ ಆರು ಮಂದಿ ಮೇಲೆ ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ.ಭರತ್ ಶೆಟ್ಟಿ, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಕಾರ್ಪೊರೇಟರ್ಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಮತ್ತೋರ್ವನ ಮೇಲೆ ಅನಿಲ್ ಜೆರಾಲ್ಡ್ ಲೋಬೊ ಎಂಬವರು ನೀಡಿರುವ ದೂರಿನನ್ವಯ ಈ ಪ್ರಕರಣ ದಾಖಲಾಗಿದೆ. ಈ ವಿಚಾರವನ್ನು ಮಂಗಳೂರು ಪೊಲೀಸ್ ಆಯುಕ್ತರು ಸಹ ಖಚಿತ ಪಡಿಸಿದ್ದಾರೆ.
ದೂರಿನಲ್ಲಿ ಇರುವುದು ಏನು?: ಶಾಲೆಯ ಶಿಕ್ಷಕಿ ಯಾವುದೇ ಧರ್ಮಕ್ಕೆ ಅವಮಾನ ಮಾಡದಿದ್ದರೂ, ಈ ಬಗ್ಗೆ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚೆ ನಡೆಸದೇ ಈ ಏಳು ಮಂದಿ ಶಾಲೆಯ ಬಳಿ ಅಕ್ರಮವಾಗಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗಿ ಶಾಲಾ ಆಡಳಿತ ಮಂಡಳಿಯ ನಿಯಮಗಳನ್ನು ವಿದ್ಯಾರ್ಥಿಗಳು ಉಲ್ಲಂಘಿಸುವಂತೆ ಪ್ರಚೋದಿಸಿರುತ್ತಾರೆ. ಶಾಲಾ ಆಡಳಿತ ಮಂಡಳಿ ವಿರುದ್ಧ ಬೆದರಿಕೆ ಹಾಕಿದ್ದಾರೆ. ಈ ಮೂಲಕ ಸಮುದಾಯಗಳ ನಡುವೆ ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿನ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಪ್ರಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದ ಹಿನ್ನೆಲೆ ಏನು? : ಮಂಗಳೂರಿನ ಜೆಪ್ಪುವಿನಲ್ಲಿರುವ ಶಿಕ್ಷಣ ಸಂಸ್ಥೆಯ ಶಿಕ್ಷಕಿಯೊಬ್ಬರು ಎಂಬುವವರು ತರಗತಿಯಲ್ಲಿ ಕೆಲ ವಿಚಾರಗಳ ಬಗ್ಗೆ ನಿಂದನೆ ಮಾಡಿದ್ದಾರೆ ಎಂದು ಪೋಷಕರು ಆಡಿಯೋ ಮೂಲಕ ಕೆಲ ಸಂಘಟನೆಗಳ ಗಮನಕ್ಕೆ ತಂದಿದ್ದರು. ಫೆ.10 ರ ಶನಿವಾರ ಪೋಷಕರು ಶಾಲಾ ಗೇಟ್ ಬಳಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಫೆ.12 ರಂದು ಕೆಲ ಸಂಘಟನೆಗಳ ಕಾರ್ಯಕರ್ತರು ಶಿಕ್ಷಣ ಸಂಸ್ಥೆ ಮುಂದೆ ಜಮಾಯಿಸಿ ಶಿಕ್ಷಕಿಯ ಅಮಾನತಿಗೆ ಆಗ್ರಹಿಸಿದ್ದರು. ಸಂಜೆಯ ವೇಳೆಗೆ ಶಾಲೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಶಾಲಾ ಆಡಳಿತ ಮಂಡಳಿಯೊಂದಿಗೆ ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದರು.
ಆ ಬಳಿಕ ಮುಖ್ಯ ಶಿಕ್ಷಕಿ ಅನಿತಾ ಎಂಬುವವರು ಮಾತನಾಡಿ, ಆರೋಪ ಎದುರಿಸುತ್ತಿರುವ ಶಿಕ್ಷಕಿಯನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಜಿಲ್ಲಾಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ತನಿಖೆ ಪಾರದರ್ಶಕದಿಂದ ಕೂಡಿರಲು ನಮ್ಮ ಸಹಕಾರಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ತನಿಖೆಯ ಅಂತಿಮ ಆದೇಶಕ್ಕೆ ಬದ್ಧರಾಗಿದ್ದೇವೆ ಎಂದಿದ್ದರು.
ಇದನ್ನೂ ಓದಿ : ಮಂಗಳೂರು: ಜೆರೋಸಾ ಶಾಲೆಯ ವಿವಾದದ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ