ಬೆಂಗಳೂರು: ದರೋಡೆಗೆ ಸಂಚು ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆ ಹಾಜರಾಗದೆ, ತಲೆಮರೆಸಿಕೊಂಡಿದ್ದ ಆರೋಪಿಯನ್ನು 12 ವರ್ಷಗಳ ಬಳಿಕ ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ವಿವೇಕ್ (34) ಬಂಧಿತ ಆರೋಪಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ಆರೋಪಿಯು ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ರೌಡಿನಿಗ್ರಹದಳದ ಇನ್ಸ್ಪೆಕ್ಟರ್ ಮಹದೇವಯ್ಯ ನೇತೃತ್ವದ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
2012ರಲ್ಲಿ ಆರ್.ಟಿ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದರೋಡೆಗೆ ಸಂಚು ಹಾಗೂ ಆರ್ಮ್ಸ್ ಆ್ಯಕ್ಟ್ನಡಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅದೇ ವರ್ಷದಲ್ಲಿ ವಿವೇಕ್ನನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ಹೊರಬಂದ ಬಳಿಕ ಮೈಸೂರು, ಮುಂಬೈ ಸೇರಿದಂತೆ ದೇಶದ ಬೇರೆ ಬೇರೆ ಭಾಗಗಳಿಗೆ ಹೋಗಿ ತಲೆಮರೆಸಿಕೊಂಡಿದ್ದ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯವು ಹಲವು ಬಾರಿ ಸಮನ್ಸ್ ಜಾರಿ ಮಾಡಿತ್ತು.
ನಿರಂತರವಾಗಿ ಗೈರು ಹಾಜರಾದ ಹಿನ್ನೆಲೆಯಲ್ಲಿ ವಿವೇಕ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಬಂಧಿಸಲು ಸತತವಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಸಂಬಂಧ ಇತ್ತೀಚೆಗೆ ಹಳೆ ಪ್ರಕರಣಗಳಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವ ಬಗ್ಗೆ ಕಡತ ಪರಿಶೀಲಿಸಿದ ಸಿಸಿಬಿ ಪೊಲೀಸರು, ಮಾಹಿತಿ ಕಲೆಹಾಕಿದಾಗ ವಿವೇಕ್ ಮೈಸೂರಿನಲ್ಲಿ ಇರುವುದು ಗೊತ್ತಾಗಿತ್ತು. ಖಚಿತ ಮಾಹಿತಿ ಮೇರೆಗೆ ಮೈಸೂರಿಗೆ ತೆರಳಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ದೋಷ ನಿವಾರಣೆ ಪೂಜೆ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಪೂಜಾರಿಯ ಬಂಧನ - Rape on Girl