ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣಾ ಟಿಕೆಟ್ಗಾಗಿ ಕಸರತ್ತು ನಡೆಸುತ್ತಿರುವ ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೀಶ್ವರ್, ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿದ್ದು ಟಿಕೆಟ್ ಖಾತರಿ ಸಂಬಂಧ ಮಾತುಕತೆ ನಡೆಸಲಿದ್ದಾರೆ ಎಂಬ ವರದಿ ಇದೆ. ಟಿಕೆಟ್ ವಿಚಾರದಲ್ಲಿನ ಅನಿಶ್ಚಿತತೆ ಹಿನ್ನೆಲೆಯಲ್ಲಿ ಭವಿಷ್ಯದ ರಾಜಕೀಯ ನಿರ್ಧಾರಕ್ಕೂ ಮುನ್ನ ದೆಹಲಿ ನಾಯಕರ ಜೊತೆ ಸಮಾಲೋಚನೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ದೆಹಲಿಗೆ ತೆರಳಿದ್ದು, ಅಲ್ಲಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಭೇಟಿ ಮಾಡಲಿದ್ದಾರೆ. ಟಿಕೆಟ್ ವಿಚಾರದ ಕುರಿತು ಮಾತುಕತೆ ನಡೆಸಲಿದ್ದು, ಬಳಿಕ ಬಿಜೆಪಿ ಹೈಕಮಾಂಡ್ನ ಇತರ ನಾಯಕರ ಭೇಟಿ ಮಾಡಲಿದ್ದಾರೆ.
ಚನ್ನಪಟ್ಟಣದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ ಬೆನ್ನಲ್ಲೇ ದೆಹಲಿಗೆ ತೆರಳಿದ ಯೋಗೀಶ್ವರ್, ಚನ್ನಪಟ್ಟಣ ಟಿಕೆಟ್ ಬಗ್ಗೆ ಖಾತರಿ ಮಾಡಿಕೊಳ್ಳಲಿದ್ದಾರೆ. ಅಕ್ಟೋಬರ್ 10ರಂದು ಕುಮಾರಸ್ವಾಮಿ ಕಾರ್ಯಕರ್ತರ ಸಭೆ ಕರೆದಿರೋ ಹಿನ್ನೆಲೆಯಲ್ಲಿ ಪ್ರಸ್ತುತ ಎಲ್ಲಾ ಬೆಳವಣಿಗೆ ಬಗ್ಗೆ ಹೈಕಮಾಂಡ್ ಗಮನಕ್ಕೆ ತಂದು ಮಾತುಕತೆ ನಡೆಸಲಿದ್ದಾರೆ.
"ಎನ್‍ಡಿಎ ಮೈತ್ರಿ ಅಭ್ಯರ್ಥಿ ಆಯ್ಕೆ ಗೊಂದಲಕ್ಕೆ ಶೀಘ್ರವೇ ತೆರೆಬೀಳಲಿದೆ. ನನಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್ ಸಿಗುವುದು ಬಹುತೇಕ ಖಚಿತ. ಯೋಗೀಶ್ವರ್, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಪಕ್ಷೇತರನಾಗಿ ಮತ್ತೆ ಗೆದ್ದು ಎನ್‌ಡಿಎ ಭಾಗವಾಗುವೆ. ಈ ವಿಚಾರವಾಗಿ ಏನೇನು ರಾಜಕೀಯ ತಿರುವು ಪಡೆದುಕೊಳ್ಳುತ್ತದೆ ಎನ್ನುವುದನ್ನು ಮುಂದೆ ನೋಡೋಣ" ಎಂದಿದ್ದರು.
ಮುಂದಿನ ನಿರ್ಧಾರಕ್ಕೂ ಮೊದಲು ಅವರು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಲಿದ್ದು, ಅದಕ್ಕಾಗಿ ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.