ಬೆಳಗಾವಿ: ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಮಹಿಳೆಯೊಬ್ಬರನ್ನು ಮನೆಯಿಂದ ಹೊರತಂದು ವಿವಸ್ತ್ರಗೊಳಿಸಿ, ಮೆರವಣಿಗೆ ನಡೆಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ಪೂರ್ಣಗೊಳಿಸಿದ್ದು, ಇಂದು ಸುಮಾರು 1,100 ಪುಟಗಳ ಆರೋಪಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದರು. ಸಿಐಡಿ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಕುಮಾರ್ ಅವರು ಬೆಳಗಾವಿಯ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮೋಹನ್ ಪ್ರಭು ಅವರಿದ್ದ ಪೀಠಕ್ಕೆ ಆರೋಪಪಟ್ಟಿ ಸಲ್ಲಿಕೆ ಮಾಡಿದ್ದಾರೆ.
2023ರ ಡಿಸೆಂಬರ್ 11ರಂದು ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಆಕೆಯೊಂದಿಗೆ ಪರಾರಿಯಾಗಿದ್ದನು. ಇದರಿಂದ ಸಿಟ್ಟಿಗೆದ್ದು, ರಾತ್ರೋರಾತ್ರಿ ಯುವತಿಯ ಕಡೆಯವರು ಯುವಕನ ತಾಯಿಯನ್ನು ಮನೆಯಿಂದ ಹೊರಗೆಳೆದು ತಂದು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದರು. ಕಾಕತಿ ಪೊಲೀಸ್ ಠಾಣೆಯಲ್ಲಿ 2023ರ ಡಿಸೆಂಬರ್ 11ರಂದು ಎಫ್‌ಐಆರ್ ದಾಖಲಾಗಿತ್ತು.
ಪೊಲೀಸರು ಓರ್ವ ಬಾಲಕ ಸೇರಿ 13 ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 109, 114, 117, 143, 147, 148, 307, 323, 324, 326, 341, 342, 353, 354, 354(b), 355, 392, 427, 452, 504, 506 ಜೊತೆಗೆ 149, 37 ಮತ್ತು 34, ಆಸ್ತಿ ನಾಶ ಮತ್ತು ನಷ್ಟ ತಡೆ ಕಾಯಿದೆ 2(ಎ) ಅಡಿ ಪ್ರಕರಣ ದಾಖಲಿಸಲಾಗಿತ್ತು. ಬಾಲಾಪರಾಧಿಯ ವಿರುದ್ಧ ಬಾಲನ್ಯಾಯ ಮಂಡಳಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.
ಈ ಪ್ರಕರಣದ ಮಾಧ್ಯಮಗಳ ವರದಿ ಆಧರಿಸಿ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿತ್ತು. ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು.
ಹಲ್ಲೆ ನಡೆದ ದಿನ ಡಿಸೆಂಬರ್ 11ರಂದು ಪ್ರೇಮಿಗಳು ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಜನವರಿ 30ರಂದು ಅವರ ಮದುವೆಯನ್ನು ಬೆಳಗಾವಿಯ ಉದ್ಯಮ ಭಾಗದ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಲಾಗಿದೆ. ಈ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿದ್ದಲ್ಲದೇ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಾಗಿತ್ತು.
ಇದನ್ನೂ ಓದಿ: ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ತಿಂಗಳಾಂತ್ಯಕ್ಕೆ ಅಂತಿಮ ವರದಿ ಸಲ್ಲಿಕೆ