ಬೆಳಗಾವಿ: ಅಫೆಕ್ಸ್ ಬ್ಯಾಂಕ್ನಲ್ಲಿ ಸಾಲ ಪಡೆದು ಮರುಪಾವತಿ ಮಾಡದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದ ಬಳಿ ಇರುವ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ಇಂದು ದಿಢೀರ್ ದಾಳಿ ಮಾಡಿ, ಪರಿಶೀಲನೆ ನಡೆಸಿದರು.
ನಾಲ್ಕು ವಾಹನಗಳಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಕಾರ್ಖಾನೆಯಲ್ಲಿ ಸುಮಾರು ಗಂಟೆಗಳ ಕಾಲ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಸೌಭಾಗ್ಯಲಕ್ಷ್ಮಿ ಶುಗರ್ ಲಿಮಿಟೆಡ್ ಕಾರ್ಖಾನೆ ಸ್ಥಾಪಿಸಲು ಜಾರಕಿಹೊಳಿ 439 ಕೋಟಿ ರೂಪಾಯಿಯನ್ನು ಅಫೆಕ್ಸ್ ಬ್ಯಾಂಕ್ನಲ್ಲಿ ಸಾಲ ಪಡೆದುಕೊಂಡಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಜನವರಿ 5ರಂದು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ನಲ್ಲಿ ಸಾಲ ಪಡೆದು ಪಾವತಿಸದೆ ಮೋಸ ಮಾಡುವ ಉದ್ದೇಶ ಹೊಂದಿದ್ದಾರೆ ಎಂದು ಬೆಂಗಳೂರಿನ ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಸಾಲ ಪಡೆಯುವ ಸಂದರ್ಭದಲ್ಲಿ ಶುಗರ್ ಕಂಪನಿಯಲ್ಲಿ ರಮೇಶ ಜಾರಕಿಹೊಳಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದು, ವಸಂತ್ ಮತ್ತು ಶಂಕರ್ ಎಂಬವರು ನಿರ್ದೇಶಕರಾಗಿದ್ದರು. ಸಾಲ ಇರುವ ಸಂದರ್ಭದಲ್ಲಿ ನಿರ್ದೇಶಕರನ್ನು ಬದಲಿಸುವಂತಿಲ್ಲ ಎಂಬ ಷರತ್ತು ವಿಧಿಸಲಾಗಿತ್ತು. ಆದರೆ, ಆರೋಪಿಗಳು/ಅರ್ಜಿದಾರರು ಕಂಪನಿಯಲ್ಲಿನ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದು, ಸಂಬಂಧಪಡದ ಬೇರೆ ವ್ಯಕ್ತಿಗಳನ್ನು ಆ ಹುದ್ದೆಗಳಿಗೆ ನೇಮಕ ಮಾಡಲಾಗಿದೆ.
ಈ ವಿಚಾರವನ್ನು ತಮ್ಮ ಗಮನಕ್ಕೆ ತಂದಿಲ್ಲ ಎಂದು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರು ಜನವರಿ 5ರಂದು ನೀಡಿದ ದೂರಿನ ಅನ್ವಯ ವಿ.ವಿ.ಪುರಂ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 406, 420 & 34ರ ಅಡಿ ಪ್ರಕರಣ ದಾಖಲಾಗಿತ್ತು. ಸದ್ಯ ರಮೇಶ ಜಾರಕಿಹೊಳಿ ಪುತ್ರ ಸಂತೋಷ ಈ ಕಾರ್ಖಾನೆ ನೋಡಿಕೊಳ್ಳುತ್ತಿದ್ದಾರೆ.
ಆ ಬಳಿಕ ತಮ್ಮ ವಿರುದ್ಧ ಎದುರಾಗಿರುವ ಬ್ಯಾಂಕ್ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ದೂರು ಮತ್ತು ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೊರೆ ಹೋಗಿದ್ದರು. ಇದರ ನಡುವೆ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ ಇಂದು ನಾಲ್ಕು ಸಿಐಡಿ ಅಧಿಕಾರಿಗಳು ಇಂದು ಕಾರ್ಖಾನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಮೇಶ್ ಜಾರಕಿಹೊಳಿ ವಿರುದ್ಧದ ಬಹುಕೋಟಿ ವಂಚನೆ ಪ್ರಕರಣ ತನಿಖೆ ಸಿಐಡಿ ಹೆಗಲಿಗೆ