ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಶೀಘ್ರದಲ್ಲೇ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ನಡೆಸಿದೆ. ಏಪ್ರಿಲ್ 18 ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಆವರಣದಲ್ಲಿ ನೇಹಾ ಹತ್ಯೆ ನಡೆದಿತ್ತು. ಈ ಸಂಬಂಧ ಆರೋಪಿ ಯುವಕ ಫಯಾಜ್‌ನನ್ನು ಪೊಲೀಸರು ಬಂಧಿಸಿದ್ದರು.
ಘಟನೆ ಹಿನ್ನೆಲೆಯಲ್ಲಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ, ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ಹಲವು ಸಂಘ ಸಂಸ್ಥೆಗಳು ಹೋರಾಟ ನಡೆಸಿದ್ದವು. ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಸಂಘಟನೆಗಳು ಆಗ್ರಹ ಮಾಡಿದ್ದವು. ಘಟನೆಯು ಸಾರ್ವಜನಿಕ ವಲಯದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ರಾಜ್ಯ ಸರ್ಕಾರವು ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸಲು ಸಿಐಡಿ ತಂಡವನ್ನು ರಚನೆ ಮಾಡಿತ್ತು.
ಆರಂಭದಲ್ಲಿ ಆರೋಪಿ ಫಯಾಜ್‌ನನ್ನು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದ ಸಿಐಡಿ ಅಧಿಕಾರಿಗಳ ತಂಡ ಕೊಲೆ ನಡೆದ ಸ್ಥಳ, ಚಾಕು ಖರೀದಿಸಿದ ಸ್ಥಳ ಹಾಗೂ ಕ್ಯಾಂಪಸ್‌ನಲ್ಲಿ ದ್ವಿಚಕ್ರವಾಹನ ನಿಲ್ಲಿಸಿದ್ದ ಸ್ಥಳ ಸೇರಿದಂತೆ ಹಲವು ಕಡೆ ಕರೆದೊಯ್ದು ಸ್ಥಳ ಮಹಜರು ನಡೆಸಿತ್ತು. ಜೊತೆಗೆ ವಿದ್ಯಾರ್ಥಿನಿ ನೇಹಾಳ ಪೋಷಕರ ವಿಚಾರಣೆಯನ್ನೂ ನಡೆಸಲಾಗಿತ್ತು.
ಹೀಗೆ ಎಲ್ಲ ಆಯಾಮಗಳೊಂದಿಗೆ ತನಿಖೆ ಕೈಗೊಂಡಿದ್ದ ಸಿಐಡಿ ತಂಡವು ಇದೀಗ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ. ಆರೋಪಿ ಫಯಾಜ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಮೇ 14ಕ್ಕೆ ಬಂಧನ ಅವಧಿಯು ಅಂತ್ಯವಾಗಲಿದೆ.
ಇದನ್ನೂ ಓದಿ: 'ನೇಹಾ ಹತ್ಯೆಯನ್ನು ರಾಜಕೀಯಕ್ಕೆ ಬಳಸಬೇಡಿ': ನಿರಂಜನ ಹಿರೇಮಠ ಮನವಿ - Niranjan Hiremath