ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿ ಪೊಲೀಸರ ತಂಡ ಆರಂಭಿಸಿದೆ.
ಸಿ.ಟಿ.ರವಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖಾಧಿಕಾರಿಯಾಗಿರುವ ಸಿಐಡಿಯ ಡಿವೈಎಸ್‌ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ, ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದೆ.
ತನಿಖಾಧಿಕಾರಿಗಳ ಮುಂದೆ ಹೇಳಿಕೆ ದಾಖಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ''ಪ್ರಕರಣವನ್ನು ನಾನು ಪ್ರತಿಷ್ಠೆಯಾಗಿ ಸ್ವೀಕರಿಸುವುದಿಲ್ಲ. ಇದು ನನ್ನ ಸ್ವಾಭಿಮಾನದ ಪ್ರಶ್ನೆ ಹಾಗೂ ಓರ್ವ ಹೆಣ್ಣುಮಗಳಿಗೆ ಆಗಿರುವ ಅವಮಾನದ ಪ್ರಶ್ನೆಯಾಗಿದೆ. ಪ್ರಕರಣದ ತನಿಖೆ ಈಗಿನ್ನೂ ಆರಂಭವಾಗಿದೆ. ಹಿನ್ನಡೆ ಅಥವಾ ಮುನ್ನಡೆಯ ಕುರಿತು ಚಿಂತಿಸುವುದಿಲ್ಲ. ಕಾನೂನು ಚೌಕಟ್ಟಿನಲ್ಲಿ ಏನು ಆಗಬೇಕಿದೆಯೋ ಅದು ಆಗಲಿದೆ. ಈ ವಿಚಾರದಲ್ಲಿ ಓರ್ವ ಹೆಣ್ಣುಮಗಳಾಗಿ ಎಲ್ಲರೂ ನನ್ನೊಂದಿಗೆ ನಿಲ್ಲಬೇಕು ಎಂದು ಕೇಳಿಕೊಳ್ಳುತ್ತೇನೆ" ಎಂದರು.
ಇದನ್ನೂ ಓದಿ: ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್: ಸಿಎಂ ಸೇರಿ ಹಲವರು ಭಾಗಿ
ಬೆಳಗಾವಿಯಲ್ಲಿ ನಡೆದ ವಿಧಾನಪರಿಷತ್ ಕಲಾಪದ ಸಂಧರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಿ.ಟಿ.ರವಿ ಅವರ ವಿರುದ್ಧ ಕೇಳಿ ಬಂದಿತ್ತು. ಸಿ.ಟಿ.ರವಿ ಅವರ ಬಂಧನದ ಬಳಿಕ ಸಾಕಷ್ಟು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದ ಪ್ರಕರಣದ ತನಿಖೆಯನ್ನು ನಂತರ ಸಿಐಡಿ ಪೊಲೀಸರಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿಸಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಐಡಿ ಪೊಲೀಸರ ತಂಡ ಇಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ದಾಖಲಿಸಿಕೊಡಿದೆ.
ಇದನ್ನೂ ಓದಿ: ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಸಚಿವ ರಾಮಲಿಂಗಾರೆಡ್ಡಿ