ಬೆಂಗಳೂರು: ಮದ್ಯ ಮಾರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಸಭೆ ಯಶಸ್ವಿಯಾಗಿದ್ದು, ಮುಷ್ಕರ ವಾಪಸ್ ಪಡೆದಿದ್ದಾರೆ.
ಮದ್ಯ ಮಾರಾಟಗಾರರು ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆ ಮದ್ಯದ ಅಂಗಡಿ ಮುಚ್ಚಿ ಮುಷ್ಕರ ನಡೆಸಲು ಮುಂದಾಗಿದ್ದರು. ಈ ಸಂಬಂಧ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯ ಮಾರಾಟಗಾರರ ಒಕ್ಕೂಟದ ಪದಾಧಿಕಾರಿಗಳ ಜೊತೆ ಸಭೆ ನಡೆಸಿದರು. ಮದ್ಯ ಮಾರಾಟಗಾರರ ಬೇಡಿಕೆ ಬಗ್ಗೆ ಸಹಾನುಭೂತಿಯಿಂದ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.
ಮದ್ಯ ಮಾರಾಟಗಾರರಿಗೆ ವ್ಯಾಪಾರ ಹೆಚ್ಚಾಗಿ ಸರ್ಕಾರಕ್ಕೆ ಆದಾಯ ತರುವಂತೆ enforcement ಮಾಡಲಾಗುವುದು. ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ರಾಜ್ಯಪಾಲರಿಗೆ ನಾವು ದೂರು ಕೊಟ್ಟಿಲ್ಲ. ಈ ಬಗ್ಗೆ ಸುಳ್ಳು ಹಬ್ಬಿಸಿದ್ದಾರೆ. ದೂರು ಕೊಟ್ಟವರಿಗೂ ನಮಗೂ ಸಂಬಂಧವೇ ಇಲ್ಲ. ಈ ಬಗ್ಗೆ ಬೇಕಿದ್ದರೆ ಪರಿಶೀಲನೆ ನಡೆಸಿ, ತನಿಖೆ ನಡೆಸಿ ಎಂದು ಮದ್ಯ ಮಾರಾಟಗಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಒಕ್ಕೊರಲಿನಿಂದ ಸ್ಪಷ್ಟಪಡಿಸಿದರು.
ಅಬಕಾರಿ ಇಲಾಖೆ ವರ್ಗಾವಣೆಗೆ ಕೌನ್ಸೆಲಿಂಗ್ ಪದ್ಧತಿ ಜಾರಿಗೆ ತರುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದರು. ಮದ್ಯ ಮಾರಾಟಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಿರುಕುಳ ನೀಡುವ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ವಹಿಸಿ. ಅಧಿಕಾರಿಗಳು ಮದ್ಯ ಮಾರಾಟಗಾರರಿಗೆ ಕಿರುಕುಳ ನೀಡದಂತೆ ನಿಗಾ ವಹಿಸುವಂತೆ ಅಬಕಾರಿ ಆಯುಕ್ತರಿಗೆ ಸೂಚನೆ ನೀಡಲಾಗುವುದು ಎಂದು ಸಿಎಂ ತಿಳಿಸಿದರು.
ಫೆಡರೇಶನ್ ಆಪ್ ವೈನ್ ಮರ್ಚಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಎಸ್.ಗುರುಸ್ವಾಮಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆ ಗಂಭೀರವಾಗಿ ಆರೋಪ ಮಾಡಿದ್ದರು. ಇತ್ತೀಚೆಗೆ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಪ್ರತಿಯೊಂದು ಮದ್ಯದಂಗಡಿಯಿಂದ ಹಿಡಿದು ಎಲ್ಲಾ ಜಿಲ್ಲೆಗಳಿಂದ ಇಂತಿಷ್ಟು ಹಣವೆಂದು ನಿಗದಿ ಮಾಡಲಾಗಿದೆ. ವೈನ್ ಅಂಗಡಿಗಳಲ್ಲಿ, ಬಾರ್ ಆ್ಯಂಡ್ ರೆಸ್ಟೋರೆಂಟ್, ಮದ್ಯದ ವರ್ತಕರು ಮುಂತಾದವರಿಂದ ಇಷ್ಟು ಪ್ರಮಾಣದಲ್ಲಿ ಹಣವೆಂದು ನಿಗದಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿ ಮೂರು 'ಜಾಗತಿಕ ಆವಿಷ್ಕಾರ ಜಿಲ್ಲೆ' ಸ್ಥಾಪನೆ: ಸಿಎಂ ಸಿದ್ದರಾಮಯ್ಯ: ಯಾವವು ಆ ಮೂರು ಜಿಲ್ಲೆಗಳು!