ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಐಟಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಪ್ರಕರಣ ಸಂಬಂಧ ಇದುವರೆಗಿನ ಬೆಳವಣಿಗೆಗಳ ಬಗ್ಗೆ ಸಿಎಂ ಅಧಿಕಾರಿಗಳಿಂದ ಮಾಹಿತಿ ಪಡೆದರು. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದು, ಲುಕ್ಔಟ್ ನೋಟಿಸ್ ಜೊತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಆರೋಪಿ ಬಂಧನಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು. ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ನಿರ್ದಾಕ್ಷಿಣ್ಯ ಹಾಗೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಹಾಗೂ ವಿಳಂಬ ಧೋರಣೆ ಸಹಿಸಲಾಗದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟರು.
ಸೂಕ್ತ ಕ್ರಮಗಳೊಂದಿಗೆ ಬಂಧನಕ್ಕೆ ಮುಂದಾಗುತ್ತೇವೆ. ಸಿಬಿಐ ಬ್ಲೂಕಾರ್ನರ್ ನೋಟಿಸ್ ಹೊರಡಿಸುವ ಸಾಧ್ಯತೆ ಇದ್ದು, ತನಿಖೆಗೆ ವೇಗ ಸಿಗಲಿದೆ. ವಿಮಾನ ನಿಲ್ದಾಣಗಳಿಂದ ಮಾಹಿತಿ ಸಿಕ್ಕ ಕೂಡಲೇ ಬಂಧಿಸಿ ಕರೆ ತರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ: ಲೈಂಗಿಕ ಕಿರುಕುಳ ಆರೋಪ ಪ್ರಕರಣ: ರೇವಣ್ಣ ನಿವಾಸದಲ್ಲಿ ಸಂತ್ರಸ್ತೆ ಸ್ಥಳ ಮಹಜರು ನಡೆಸಿದ ಎಸ್ಐಟಿ - SIT Site inspection