ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡಿದರು. ವಿಕಲಚೇತನರ ಬಳಿಗೆ ಹೋಗಿ ಅಹವಾಲುಗಳನ್ನು ಸ್ವೀಕರಿಸುವ ಮೂಲಕ ಮುಖ್ಯಮಂತ್ರಿಗಳ ಅಹವಾಲು ಸ್ವೀಕಾರ ಅಭಿಯಾನಕ್ಕೆ ಚಾಲನೆ ನೀಡಿದರು.
ತ್ರಿಚಕ್ರ ವಾಹನ, ಸರ್ಕಾರಿ ಉದ್ಯೋಗ, ನಿಗಮ ಮಂಡಳಿಯಲ್ಲಿ ಅವಕಾಶ, ಗುತ್ತಿಗೆ ನೌಕರಿ, ಸ್ವಂತ ಉದ್ಯೋಗಕ್ಕೆ ಅನುದಾನ, ಸಾಲದ ಸವಲತ್ತು ಸೇರಿ ನಾನಾ ಬೇಡಿಕೆಗಳನ್ನು ವಿಕಲಚೇತನ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿಗಳ ಮುಂದಿಟ್ಟರು. ಪ್ರತಿಯೊಬ್ಬ ಕಾರ್ಯಕರ್ತರ ಅಹವಾಲು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತೊಡಗಿಸಿಕೊಂಡಿರುವ ಬಗ್ಗೆ ವಿವರವಾಗಿ ಕೇಳಿ ತಿಳಿದರು. ಬಳಿಕ ತಮ್ಮ ಸಿಬ್ಬಂದಿಗೆ ಅಹವಾಲುಗಳನ್ನು ಪಟ್ಟಿ ಮಾಡಿಕೊಂಡು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೇಡಿಕೆ ಈಡೇರಿಸಬೇಕು ಎನ್ನುವ ಸ್ಪಷ್ಟ ಸೂಚನೆ ನೀಡಿದರು. ತಕ್ಷಣ ಬಗೆಹರಿಸಬಹುದಾದ ಬೇಡಿಕೆಗಳನ್ನು ಕೂಡಲೇ ಬಗೆಹರಿಸಲು ತಮ್ಮ ಅಧಿಕಾರಿ ಮತ್ತು ಸಿಬ್ಬಂದಿಗೆ ಸ್ಥಳದಲ್ಲೇ ಸಿಎಂ ಸೂಚನೆ ನೀಡಿದರು. ಅಹವಾಲು ಸ್ವೀಕಾರಕ್ಕೆ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಆಗಮಿಸಿದ್ದರು.
ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ: ಅಹವಾಲು ಸ್ವೀಕಾರ ವೇಳೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಸಿಎಂ ಬಳಿ ಬೇಡಿಕೆ ಇಟ್ಟರು. 10-12 ನಿಗಮ ಮಂಡಳಿ ನೇಮಕಾತಿ ಬಾಕಿ ಇದೆ. ಕೆಪಿಸಿಸಿ ಅಧ್ಯಕ್ಷರ ಜೊತೆ ಮಾತನಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಭರವಸೆ ನೀಡಿದ್ದಾರೆ. ನಿಗಮ ಮಂಡಳಿ ಸಂಬಂಧಿತ ಅರ್ಜಿಗಳ ಬಗ್ಗೆ ಜಿ.ಪರಮೇಶ್ವರ್ ನೇತೃತ್ವದ ಸಮಿತಿಗೆ ಪಟ್ಟಿಯನ್ನು ಕೊಡಲು ಸೂಚಿಸಿದರು.
ಹುಬ್ಬಳ್ಳಿ ಧಾರವಾಡ ಜಿಲ್ಲಾಧಿಕಾರಿಗಳಿಗೆ ಸೂಚನೆ: ಬೀದಿ ಬದಿ ವ್ಯಾಪಾರಿಗಳಿಗೆ ಅನಗತ್ಯ ತೊಂದರೆ ಕೊಡುತ್ತಿದ್ದಾರೆ. ಎತ್ತಂಗಡಿ ಮಾಡಿಸುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಬೀದಿ ವ್ಯಾಪಾರಿಗಳ ಕಾಂಗ್ರೆಸ್ ಘಟಕದ ಇಸ್ಮಾಯಿಲ್ ಅವರು ಮುಖ್ಯಮಂತ್ರಿಗಳಿಗೆ ಅಹವಾಲು ಸಲ್ಲಿಸಿದರು. ಇದಕ್ಕೆ ಗರಂ ಆದ ಸಿಎಂ ಸ್ಥಳದಿಂದಲೇ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಬೀದಿ ಬದಿ ವ್ಯಾಪಾರಿಗಳ ಜೊತೆ ಮಾನವೀಯವಾಗಿ ವರ್ತಿಸಬೇಕು. ಅವರಿಗೆ ಅನಗತ್ಯ ತೊಂದರೆ ಕೊಡಬಾರದು ಎನ್ನುವ ಸೂಚನೆ ನೀಡಿದರು.
KMF ಎಂಡಿಗೆ CM ಸೂಚನೆ: ಸದ್ಯ KMF ನಲ್ಲಿರುವ ಸಾಫ್ಟ್ವೇರ್ ಹಾಲು ಉತ್ಪಾದಕರಿಗೆ ಅನುಕೂಲ ಆಗಿಲ್ಲದಿರುವುದರಿಂದ ಅನುಕೂಲವಾದ ಕನ್ನಡ ಸಾಫ್ಟ್ವೇರ್ ಅಳವಡಿಸುವಂತೆ ಮೈಸೂರಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ನೌಕರರ ಮಹಾಮಂಡಲದ ಎಸ್.ಶಿವನಾಗಪ್ಪ ಅವರು ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಸ್ಥಳದಲ್ಲೇ KMF ಎಂಡಿ ಅವರಿಗೆ ಫೋನ್ ಮೂಲಕ ಸಂಪರ್ಕಿಸಿ ಹಾಲು ಉತ್ಪಾದಕರ ಸ್ನೇಹಿಯಾಗಿರುವ ಸಾಫ್ಟ್ವೇರ್ ಅನ್ನು ಅಳವಡಿಸುವಂತೆ ಸೂಚನೆ ನೀಡಿದರು.
ಓದಿ: ದಕ್ಷಿಣ ಕನ್ನಡ: ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ರಾಜೀನಾಮೆ - Bhaskar Kodimbala resignation