ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯು ಡಿಸೆಂಬರ್ 5ರಂದು ನಡೆಯಲಿದೆ.
ಶುಕ್ರವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರಿದ್ದ ವಿಭಾಗೀಯ ಪೀಠ ಪ್ರಾರಂಭವಾಗುತ್ತಿದ್ದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ದ ಸಾಲಿಸೇಟರ್ ಜನರಲ್ ತುಷಾರ್ ಮೆಹ್ತಾ, ''ಅರ್ಜಿ ವಿಚಾರಣೆ ಶನಿವಾರ ನಿಗದಿಯಾಗಿದೆ. ಆದರೆ, ಶನಿವಾರ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಅರ್ಜಿ ವಿಚಾರಣೆಯನ್ನು ಮತ್ತೊಂದು ದಿನಕ್ಕೆ ನಿಗದಿ ಮಾಡಬೇಕು'' ಎಂದು ಮನವಿ ಮಾಡಿದರು.
ಈ ವೇಳೆ ಸಿದ್ದರಾಮಯ್ಯ ಪರ ಹಾಜರಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ''ಸಾಲಿಸಿಟರ್ ಜನರಲ್ ರಾಜ್ಯಪಾಲರ ಪರವಾಗಿ ವಾದ ಮಂಡಿಸಲಿದ್ದಾರೆ. ಅವರು ಮಾಡಬೇಕಾದ ವಾದವನ್ನು ಈಗಾಗಲೇ ಮುಗಿಸಿದ್ದಾರೆ. ಅದನ್ನು ನಾವು ಪ್ರಶ್ನೆ ಮಾಡಿದ್ದೇವೆ. ಪ್ರಕರಣದಲ್ಲಿ ಅವರು ಔಪಚಾರಿಕ ಪ್ರತಿವಾದಿಯಾಗಿದ್ದಾರೆ. ಅರ್ಜಿ ವಿಚಾರಣೆ ಮುಂದೂಡುವುದಕ್ಕೆ ಯಾವುದೇ ಆಕ್ಷೇಪವಿಲ್ಲ. ಆದರೆ, ನಮ್ಮ ವಾದವನ್ನು ಆಲಿಸಿ, ಮಧ್ಯಂತರ ಮನವಿಯ ಕುರಿತು ಆದೇಶ ನೀಡಬೇಕು'' ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯನ್ಯಾಯಮೂರ್ತಿ ಅಂಜಾರಿಯಾ, ''ವಿಷಯ ಏನು ಎನ್ನುವುದೇ ನಮಗೆ ಗೊತ್ತಿಲ್ಲ. ವಾದ ಆಲಿಸುವುದಕ್ಕೂ ಮುನ್ನ ಮಧ್ಯಂತರ ಆದೇಶ ನೀಡುವುದಕ್ಕೆ ಸಾಧ್ಯವಿಲ್ಲ. ನೀವು ವಾದ ಮಾಡಿ, ಮಧ್ಯಂತರ ಆದೇಶ ನೀಡುವ ಪ್ರಶ್ನೆ ಏನಿದೆ'' ಎಂದು ತಿಳಿಸಿದರು.
ಇದನ್ನೂ ಓದಿ: ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
ಈ ವೇಳೆ ಸಿದ್ದರಾಮಯ್ಯ ಪರ ವಾದ ಮಂಡಿಸಲಿರುವ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಾಜರಾಗಿ, ''ಇದೇ ಶನಿವಾರ (23 ರಂದು) ಬೆಂಗಳೂರಿಗೆ ಬಂದು ವಾದ ಮಂಡನೆ ಮಾಡಲಿದ್ದೇನೆ. ಆದರೆ, ನ್ಯಾಯಾಲಯ ತೀರ್ಮಾನಕ್ಕೆ ಬಿಟ್ಟಿದ್ದು'' ಎಂದು ತಿಳಿಸಿದರು. ವಾದ ಆಲಿಸಿದ ಪೀಠ, ವಿಚಾರಣೆಯನ್ನು ಡಿಸೆಂಬರ್ 5ಕ್ಕೆ ನಿಗದಿಪಡಿಸಿ ಆದೇಶಿಸಿತು.
ಪ್ರಕರಣದ ಹಿನ್ನೆಲೆ: ಮುಡಾ ಪ್ರಕರಣ ಕುರಿತು ಮುಖ್ಯಮಂತ್ರಿ ವಿರುದ್ಧ ಪೊಲೀಸ್ ತನಿಖೆ ಮತ್ತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆಗಸ್ಟ್ 17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಆ.19ರಂದು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅಂದೇ ರಾಜ್ಯಪಾಲರ ಆದೇಶ ಆಧರಿಸಿ ಮುಖ್ಯಮಂತ್ರಿ ವಿರುದ್ಧ ಆತುರದ ಕ್ರಮ ಜರುಗಿಸದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ಆದೇಶ ಮಾಡಿತ್ತು. ಸೆ.12ರಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಸೆ.24ರಂದು ಮುಖ್ಯಮಂತ್ರಿಯ ಅರ್ಜಿ ವಜಾಗೊಳಿಸಿ, ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸ್ ತನಿಖೆ ನಡೆಸಲು ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು.
ಇದನ್ನೂ ಓದಿ: ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ವಾಲ್ಮೀಕಿ ನಿಗಮದ ಹಗರಣ ತನಿಖೆಗೆ ಕೋರಿ ಬಿಜೆಪಿ ಮುಖಂಡರ ಅರ್ಜಿ: ಸಿಬಿಐಗೆ ನೋಟಿಸ್